ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ | ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರು ಪತ್ತೆ!

Published 13 ಜುಲೈ 2023, 14:06 IST
Last Updated 13 ಜುಲೈ 2023, 14:06 IST
ಅಕ್ಷರ ಗಾತ್ರ

ಮಡಿಕೇರಿ: ಕಳೆದ ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರನ್ನು ಜಿಲ್ಲಾ ಕಾರ್ಮಿಕ ಇಲಾಖೆ ಪತ್ತೆ ಮಾಡಿದೆ.

ಈ ವಿಷಯ ಇಲ್ಲಿ ಗುರುವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ ಮಾತನಾಡಿ, ‘ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ ಕೈಗೊಳ್ಳಲಾಗಿದೆ. ಕಳೆದ ಮೂರೂವರೆ ತಿಂಗಳಲ್ಲಿ ಹೋಟೆಲ್, ಅಂಗಡಿ, ಕಾರ್ಖಾನೆ, ಕಲ್ಲುಕೋರೆ, ತೋಟ, ಸೇರಿದಂತೆ ಸುಮಾರು 5,077 ಸ್ಥಳಗಳಲ್ಲಿ ತಪಾಸಣಾ ಕಾರ್ಯ ಕೈಗೊಂಡು, 8 ಕಡೆಗಳಲ್ಲಿ 11 ಮಕ್ಕಳನ್ನು ಗುರುತಿಸಿ, ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಕಳೆದ ವರ್ಷ 304 ಕಡೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು. ಇದರಲ್ಲಿ 10 ಪ್ರಕರಣ ದಾಖಲಿಸಿ, 3 ಪ್ರಕರಣಕ್ಕೆ ಸುಮಾರು ₹ 44 ಸಾವಿರ ದಂಡವನ್ನು ನ್ಯಾಯಾಲಯದ ಮೂಲಕ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಂದು ಆಟೊಗಳಿಗೆ ಬ್ಯಾನರ್ ಕಟ್ಟಿ ಪ್ರಚಾರ ಕೈಗೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿ ಒಳಗೊಂಡ 2-3 ನಿಮಿಷದ ವಿಡಿಯೊ ಮಾಡಿಸಿ ಜಾಗೃತಿ ಮೂಡಿಸಲಾಗಿದೆ ಎಂದರು.

ಜಿಲ್ಲೆಯಲ್ಲಿರುವ ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಸದಸ್ಯರನ್ನು ಒಟ್ಟುಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳು ಕೆಲಸ ಮಾಡುತ್ತಿರುವುದು ಕಂಡು ಬಂದರೆ ಮಕ್ಕಳ ವಯಸ್ಸು, ವಾಸಿಸುವ ಸ್ಥಳ, ವಿದ್ಯಾಭ್ಯಾಸದ ಮಟ್ಟ ಇವುಗಳ ಮಾಹಿತಿಯನ್ನು ವಿಚಾರಿಸುವ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದೂ ಹೇಳಿದರು.

ಮಕ್ಕಳ ಸಹಾಯವಾಣಿ-1098 ರ ಬಗ್ಗೆ ಬಾಲಕಾರ್ಮಿಕ ಪದ್ಧತಿ ಕುರಿತ ಕಿರುಚಿತ್ರಗಳನ್ನು ಸಿದ್ಧಪಡಿಸಿ, ಪ್ರತಿ ಶಾಲೆಗಳಿಗೆ ಕಳುಹಿಸಿ, ಇವುಗಳನ್ನು ಪ್ರತಿ ಶಾಲೆಗಳಲ್ಲಿ ಭಿತ್ತರಿಸುವ ಮೂಲಕ ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಸೆಸ್ಕ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೇವಯ್ಯ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ರಘು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕಿ ಕವಿತಾ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಕೆ.ಎನ್.ಲೀನಾ, ನಿಕಿಲ್‍ಚಂದ್ರ, ವಿಶೇಷ ಮಕ್ಕಳ ರಕ್ಷಣಾ ಘಟಕದ ಮಹೇಶ್, ಉಪ ವಿಭಾಗಾಧಿಕಾರಿ ಕಚೇರಿಯ ಶಿರಸ್ತೇದಾರ ಪ್ರವೀಣ್ ಕುಮಾರ್, ವಿಶೇಷ ಮಕ್ಕಳ ರಕ್ಷಣಾ ಪೊಲೀಸ್ ಘಟಕದ ನೋಡಲ್ ಅಧಿಕಾರಿ ಎಂ.ಬಿ.ಸುಮತಿ, ಮಕ್ಕಳ ಕಲ್ಯಾಣ ಸಮಿತಿಯ ಸಿರಾಜ್ ಅಹಮ್ಮದ್ ಇದ್ದರು.

ತಪಾಸಣೆ ಕುರಿತ ಮಾಹಿತಿ ಪ್ರತಿ ತಿಂಗಳೂ ಕೊಡಿ: ಡಿ.ಸಿ.ಸೂಚನೆ

ತಪಾಸಣೆ ನಡೆಸಿದ ವಿವರಗಳನ್ನು ಪ್ರತಿ ತಿಂಗಳೂ ಕೊಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿಯೂ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು.

14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನಿಡಬೇಕು. ಎಲ್ಲೆಡೆ ಹೆಚ್ಚಿನ ತಪಾಸಣೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಸಮೀಕ್ಷೆಯಲ್ಲಿ ಪತ್ತೆಯಾದ ಬಾಲಕಾರ್ಮಿಕರನ್ನು ಜಿಲ್ಲೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಗಳಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಹಾಗೂ ಮುಖ್ಯವಾಹಿನಿ ಶಾಲೆಗಳಲ್ಲಿ ದಾಖಲಿಸಬೇಕು ಎಂದು ಹೇಳಿದರು.

ಹೋಟೆಲ್ ಅಂಗಡಿ ಕಾರ್ಖಾನೆ ಕಲ್ಲುಕೋರೆ ಹೀಗೆ ಯಾವುದೇ ಕ್ಷೇತ್ರದಲ್ಲಿಯೂ ಬಾಲಕಾರ್ಮಿಕರು ಕಂಡು ಬರಬಾರದು. ಕಂಡುಬಂದಲ್ಲಿ ನಿಯಮಾನುಸಾರ ಕ್ರಮವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಬೀದಿನಾಟಕ ಮೂಲಕ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಮಡಿಕೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT