ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: 9 ತಿಂಗಳಲ್ಲಿ 34 ಶಿಶುಗಳು ಸಾವು

Published 18 ಜನವರಿ 2024, 5:15 IST
Last Updated 18 ಜನವರಿ 2024, 5:15 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಮೂವರು ತಾಯಂದಿರು ಹಾಗೂ 34 ಶಿಶುಗಳು  ಮೃತಪಟ್ಟಿದ್ದಾರೆ.

ಈ ವಿಷಯ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಹಿರಂಗಗೊಂಡಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶೇಕಡವಾರು ಹೆರಿಗೆ, ಶಸ್ತ್ರಚಿಕಿತ್ಸೆ, ತಾಯಿ ಮತ್ತು ಶಿಶು ಸಂರಕ್ಷಣೆ ಮತ್ತಿತರ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 2023ರ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ ಹೆರಿಗೆ ಸಂದರ್ಭದಲ್ಲಿ ಮೂವರು ತಾಯಂದಿರು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಹಾಗೆಯೇ, 2023 ರ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ 34 ಶಿಶುಗಳು ನಾನಾ ಕಾರಣಗಳಿಂದ ಮರಣ ಹೊಂದಿವೆ’ ಎಂದು ಅವರು ತಿಳಿಸಿದರು.

ಕ್ಷಯರೋಗ, ಮಲೇರಿಯಾ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಪ್ರಗತಿ ಸಂಬಂಧ ಅವರು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ‘ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಆಂಬ್ಯುಲೆನ್ಸ್ ಸೌಲಭ್ಯ ಇರಬೇಕು. ಜೊತೆಗೆ, ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಸೌಕರ್ಯ ಇಲ್ಲವೆಂದು ಕೇಳಿ ಬರಬಾರದು. ಹೆರಿಗೆಗೆ ದಾಖಲಾಗುವ ತಾಯಿಯ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ, ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯರಾದ ಡಾ.ಸೋಮಶೇಖರ್, ಡಾ.ಪುರುಷೋತ್ತಮ, ಡಾ.ಚೇತನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯಕ್ರಮ ಸಂಯೋಜಕ ಕೃಷ್ಣಪ್ಪ, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯಾ ಸಭೆಯಲ್ಲಿ ಭಾಗವಹಿಸಿದ್ದರು.

ಮಡಿಕೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಅಧಿಕಾರಿಗಳು ಭಾಗಿಯಾದರು
ಮಡಿಕೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಅಧಿಕಾರಿಗಳು ಭಾಗಿಯಾದರು
ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಲು ಡಿ.ಸಿ ಸೂಚನೆ ಪಾಳಿ ವ್ಯವಸ್ಥೆಯಲ್ಲಿ ವೈದ್ಯರು ಕಾರ್ಯನಿರ್ವಹಿಸಲು ನಿರ್ದೇಶನ ದೂರು ಬಾರದಂತೆ ಎಚ್ಚರ ವಹಿಸಲು ಡಿ.ಸಿ. ಸಲಹೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT