ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ- ಜಿಲ್ಲಾಧಿಕಾರಿ

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ ಜಿಲ್ಲಾಧಿಕಾರಿ
Published 11 ಮಾರ್ಚ್ 2024, 13:56 IST
Last Updated 11 ಮಾರ್ಚ್ 2024, 13:56 IST
ಅಕ್ಷರ ಗಾತ್ರ

ಮಡಿಕೇರಿ: ‘ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳು ಶೇ 60ರಷ್ಟು ಕನ್ನಡ ಭಾಷೆಯಲ್ಲಿರುವುದು ಕಡ್ಡಾಯ’ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.

ಈ ಸಂಬಂಧ ಸರ್ಕಾರ ಈಚೆಗೆ ಹೊರಡಿಸಿದ ಅಧಿಸೂಚನೆ ಕುರಿತು ಇಲ್ಲಿ ಸೋಮವಾರ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು.

‘ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯವಾಗಿರುವ ಕುರಿತು ಎಲ್ಲ ಅಧಿಕಾರಿಗಳೂ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆಯೂ’ ಅವರು ನಿರ್ದೇಶನ ನೀಡಿದರು.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ, ವಿಧೇಯಕ, 2024 ಈ ಸಂಬಂಧ ಫೆಬ್ರುವರಿ 25ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ’ ಅವರು ತಿಳಿಸಿದರು.

‘ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡಭಾಷೆಯನ್ನು ಶೇ 60ರಷ್ಟು ಪ್ರದರ್ಶಿಸಬೇಕು ಅಥವಾ ಬರೆಸಿರಬೇಕು’ ಎಂದು ಅವರು ಆದೇಶಿಸಿದರು.

‘ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ ₹ 5 ಸಾವಿರ, ಎರಡನೇ ಹಂತದಲ್ಲಿ ₹ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ, ಪರವಾನಗಿಯನ್ನು ರದ್ದುಪಡಿಸಬೇಕು’ ಎಂದು ಅವರು ಹೇಳಿದರು.

‘ನಾಮಫಲಕ ಬರೆಸಲು ಅಥವಾ ಪ್ರದರ್ಶಿಸಲು 7 ದಿನಗಳ ಕಾಲಾವಕಾಶ ನೀಡಬೇಕು’ ಎಂದೂ ಅವರು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ‘ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯಾ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು

14ರಂದು ಗ್ಯಾರಂಟಿ ಸಮಾವೇಶ

‘ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳ ಸಂಬಂಧ ‘ಗ್ಯಾರಂಟಿ ಸಮಾವೇಶ’ವು ಮಾರ್ಚ್ 14ರಂದು ಮಡಿಕೇರಿ ನಗರದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚಿಸಿದ ಅವರು ‘ಉಪಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ’ ಅಧಿಕಾರಿಗಳಿಗೆ ಸೂಚಿಸಿದರು. ‘ಶಕ್ತಿ ಗೃಹಲಕ್ಷ್ಮಿ ಗೃಹಜ್ಯೋತಿ ಅನ್ನಭಾಗ್ಯ ಯುವನಿಧಿ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳ ಸಮಾವೇಶವು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ’ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾಬಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖಾ ಗಣಪತಿ ಆಹಾರ ಇಲಾಖೆ ಶಿರಸ್ತೇದಾರರಾದ ವೀಣಾ ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕದ ಮೆಹಬೂಬ್ ಅಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT