ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು: ‘ಸ್ವಚ್ಛತೆಯೇ ಸೇವೆ’ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

Published : 20 ಸೆಪ್ಟೆಂಬರ್ 2024, 9:04 IST
Last Updated : 20 ಸೆಪ್ಟೆಂಬರ್ 2024, 9:04 IST
ಫಾಲೋ ಮಾಡಿ
Comments

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ‘ಸ್ವಚ್ಛತೆಯೇ ಸೇವೆ’ ಎಂಬ ಪರಿಕಲ್ಪನೆಯಡಿ 15 ದಿನಗಳ ಸರಣಿ ಕಾರ್ಯಕ್ರಮಗಳು ಆರಂಭವಾಗಿವೆ. ಈ ಅವಧಿಯಲ್ಲಿ ಹಲವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವುದು, ಕೊಳೆತು ನಾರುತ್ತಿರುವ ಪ್ರದೇಶಗಳನ್ನು ಸ್ವಚ್ಛಗೊಳಿಸುವ ಗುರಿ ಹೊಂದಲಾಗಿದೆ.

ಮುಖ್ಯವಾಗಿ, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿವಾರು ನಿತ್ಯವೂ ಕಸ ಬೀಳುವ ಪ್ರದೇಶಗಳನ್ನು ‘ಬ್ಲಾಕ್‌ಸ್ಪಾಟ್‌’ಗಳೆಂದು ಗುರುತಿಸಲಾಗುತ್ತದೆ. ಅದನ್ನು ಮೊದಲು ಸ್ವಚ್ಛಗೊಳಿಸಿ ಅಲ್ಲಿ ಕಸ ಹಾಕದಂತೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮತ್ತೆ ಅಲ್ಲಿ ಕಸ ಹಾಕಿದರೆ ದಂಡವನ್ನೂ ವಿಧಿಸಲಾಗುತ್ತದೆ. ಒಟ್ಟಾರೆ, ಕಸ ಬಿದ್ದಿರುವ ಆ ಬ್ಲಾಕ್‌ಸ್ಪಾಟ್ ಅನ್ನು ಸ್ವಚ್ಛತೆಯಿಂದ ಸದಾ ಕಂಗೊಳಿಸುವಂತೆ ಮಾಡುವ ಉದ್ದೇಶ ಈ ಕಾರ್ಯಕ್ರಮದ ಹಿಂದಿದೆ.

ಕೇವಲ ಇದೊಂದೇ ಅಲ್ಲ, ಪ್ರವಾಸಿ ಸ್ಥಳಗಳಲ್ಲಿ ಹಾಗೂ ಮನೆಮನೆಗೆ ಭೇಟಿ ನೀಡಿ ಸ್ವಚ್ಛತೆ ಕುರಿತು ಅರಿವು ಮೂಡಿಸುವುದು, ಬೃಹತ್ ಶ್ರಮದಾನದ ಮೂಲಕ ಸ್ವಚ್ಛಗೊಳಿಸುವುದು ಸೇರಿದಂತೆ ಹಲವು ಹತ್ತು ಕಾರ್ಯಕ್ರಮ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಅ. 2ರವರೆಗೂ ನಡೆಯಲಿದೆ.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಹತ್ವದ ಈ ಕಾರ್ಯಕ್ರಮದಕ್ಕೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ’ ಎಂದು ಹೇಳಿದರು.

ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ‘ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಸಹಭಾಗಿತ್ವದೊಡನೆ ಸ್ವಚ್ಛಗೊಳಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಜೊತೆಗೆ ಈ ರೀತಿಯಾಗಿ ಅಕ್ರಮವಾಗಿ ತ್ಯಾಜ್ಯ ಸುರಿಯುವವರಿಗೆ ದಂಡ ವಿಧಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾಮಾಂತರ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ.ಧನರಾಜು ಅವರು ದೀಪ ಬೆಳಗಿಸುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನದ ಭಾಗವಾಗಿ ಸಸಿ ನೆಟ್ಟು ನೀರೆರೆಯಲಾಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕರಾದ ಹರ್ಷಿತಾ, ಪೆಮ್ಮಯ್ಯ, ಸೂರಜ್, ವಾಸುದೇವ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT