ಮಂಗಳವಾರ, ಡಿಸೆಂಬರ್ 6, 2022
21 °C
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಕಾರ್ಯಕ್ರಮ

‘ಅಂಬೇಡ್ಕರ್ ಸಮಗ್ರ ಬರಹ, ಭಾಷಣ ಓದಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಭಾರತ ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.

ನಗರದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು’ ಕುರಿತು ಬುಧವಾರ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಪ್ರತಿನಿತ್ಯ ಕನಿಷ್ಠ ಎರಡು ಗಂಟೆಯಾದರೂ ಮೊಬೈಲ್ ಮತ್ತು ಟಿ.ವಿಯಿಂದ ದೂರವಿದ್ದು, ರಾಷ್ಟ್ರದ ಹಲವು ಮಹನೀಯರ ಪುಸ್ತಕ ಓದಬೇಕು. ತಂದೆ, ತಾಯಂದಿರು ತಮ್ಮ ಮಕ್ಕಳ ಬಗ್ಗೆ ಕನಸು ಕಟ್ಟಿಕೊಂಡಿರುತ್ತಾರೆ. ಪೋಷಕರ ಕನಸನ್ನು ನನಸು ಮಾಡುವತ್ತ ವಿದ್ಯಾರ್ಥಿಗಳು ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಸ್ವಾತಂತ್ರ್ಯ ಭಾರತದ ಮೊದಲ ಕಾನೂನು ಸಚಿವರಾಗಿ ಹಲವು ಕಾಯ್ದೆ ಮತ್ತು ಕಾನೂನುಗಳನ್ನು ಸಂವಿಧಾನದ ಮೂಲಕ ಜಾರಿಗೊಳಿಸಿದ್ದಾರೆ. ಬಾಂಬೆ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ಪದವಿ, ಬಳಿಕ ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದಾರೆ. ನಂತರ, ಲಂಡನ್‍ನ ವಿವಿಯಲ್ಲಿ ಡಿಎಸ್‍ಸಿ ಪದವಿ ಪಡೆದಿದ್ದಾರೆ’ ಎಂದು ಅವರು ತಿಳಿಸಿದರು.

‘ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಇಡೀ ವಿಶ್ವದಲ್ಲಿ ಮಾದರಿ ಸಂವಿಧಾನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ಚಿನ್ನಸ್ವಾಮಿ ಮಾತನಾಡಿ, ‘ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಸಮಗ್ರ ಬರಹಗಳು ಮತ್ತು ಭಾಷಣಗಳ’ ಕುರಿತು 21 ಸಂಪುಟಗಳನ್ನು ಹೊರತಂದಿದ್ದು, ಈ ಪುಸ್ತಕಗಳನ್ನು ಅಧ್ಯಯನ ಮಾಡಬೇಕು’ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು, ಜೀವನ ಮತ್ತು ಬದುಕು ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಎಂ.ಎಸ್.ನೇತ್ರಾವತಿ (ಪ್ರಥಮ), ಎ.ಎಸ್.ಜಸ್ಮಿತಾ(ದ್ವಿತೀಯ), ಎಚ್.ನೇಹಾ ಸತೀಶ್ (ತೃತೀಯ) ವಿದ್ಯಾಥಿನಿಯರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳು ಪುಸ್ತಕವನ್ನು ಬಹುಮಾನವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ, ಸಹಾಯಕ ಪ್ರಾಧ್ಯಪಕರಾದ ಕೋರನ ಸರಸ್ವತಿ, ಕನ್ನಿಕಾ, ಸತೀಶ್, ನಿರ್ಮಲಾ, ನಮಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು