ಮಡಿಕೇರಿ: ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿಯ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಏರ್ಪಡಿಸಿದೆ. ಸ್ಪರ್ಧೆಯು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ.
ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ ₹ 31 ಸಾವಿರ ದ್ವಿತೀಯ ₹ 21 ಸಾವಿರ ಮತ್ತು ತೃತೀಯ ₹ 11 ಸಾವಿರ ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ₹ 3 ಸಾವಿರ, ದ್ವಿತೀಯ ₹ 2 ಸಾವಿರ ಮತ್ತು ತೃತೀಯ ₹ 1 ಸಾವಿರ ಬಹುಮಾನ ನೀಡಲಾಗುತ್ತದೆ.
ಪ್ರೌಢಶಾಲಾ ವಿಭಾಗ:
ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ
ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,– ಈ 4 ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1,500 ಪದಗಳಿಗೆ ಮೀರದಂತೆ ಪದವಿಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ:
ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, ಗಾಂಧೀಜಿ ಅವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, ಗಾಂಧೀಜಿ ಅವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು– ಈ 5 ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2 ಸಾವಿರ ಪದಗಳಿಗೆ ಮೀರದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಪ್ರಬಂಧ ಬರೆಯಬೇಕು.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ 3 ಪ್ರಬಂಧಗಳಿಗೆ ಅ. 2ರಂದು ಜಿಲ್ಲಾಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.
‘ಆಯಾಯ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ತಾಲ್ಲೂಕು ಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಪ್ರತಿ ವಿಭಾಗದಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರ ಪ್ರಬಂಧಗಳನ್ನು ಆ. 30 ರ ಒಳಗೆ ‘ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ’ ಇಲ್ಲಿಗೆ ಕಳುಹಿಸಬೇಕು.
ಪ್ರಬಂಧಕಾರರ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.
ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯ ಮಟ್ಟದಲ್ಲಿ ಮರು ಮೌಲ್ಯಮಾಪನ ಮಾಡಿ, ರಾಜ್ಯ ಮಟ್ಟದ ಫಲಿತಾಂಶ ಘೋಷಿಸಲಾಗುತ್ತದೆ. ಮಾಹಿತಿಗೆ ಸಹಾಯಕ ನಿರ್ದೇಶಕರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಮೊ: 9480841228 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.