ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಜೀವಹಾನಿಯಾಗದಂತೆ ಎಚ್ಚರ ವಹಿಸಿ; ಜಿಲ್ಲಾಧಿಕಾರಿಯಿಂದ ಸೂಚನೆ

ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ; ಹಲವು ನಿರ್ದೇಶನ
Published 5 ಜುಲೈ 2024, 4:08 IST
Last Updated 5 ಜುಲೈ 2024, 4:08 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇಲ್ಲಿ ಗುರುವಾರ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಹಲವು ಸೂಚನೆಗಳನ್ನು ನೀಡಿದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಎಚ್ಚರ ವಹಿಸಬೇಕು. ಯಾವುದೇ ಬಗೆಯ ಅವಘಡಗಳು ಸಂಭವಿಸದಂತೆ ಸದಾ ಎಚ್ಚರ ವಹಿಸಬೇಕು, ಅಧಿಕಾರಿಗಳು ಸನ್ನದ್ಧತೆಯಿಂದ ಇರಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಹಾಗೂ ಜಲಾಶಯಗಳು ಹಾಗೂ ನದಿಗಳಿಗೆ ಯಾರೂ ಸಹ ತೆರಳದಂತೆ ಎಚ್ಚರ ವಹಿಸಬೇಕು. ಮಾಹಿತಿ ಫಲಕಗಳನ್ನೂ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

2018 ರಿಂದ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಕರೆ ಮಾಡಿದಾಗ ಸ್ವೀಕರಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ, ತಹಶೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ ಎಂದರು.

ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಎಲ್ಲಾ ಬಗೆಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಇರಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಅವರು ಹೇಳಿದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದೂ ಅವರು ಎಚ್ಚರಿಕೆ ನೀಡಿದರು.

ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬಂಧಿಸಿದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ಅವರು ರಜೆ ಘೋಷಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು

ಪ್ರಾಕೃತಿಕ ವಿಕೋಪ ಎದುರಿಸುವ ಸಂಬಂಧ ಎನ್‍ಡಿಆರ್‌ಎಫ್, ಪೊಲೀಸ್, ಅಗ್ನಿಶಾಮಕ ದಳ ಇತರರ ಜೊತೆಗೂಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ‘ಪ್ರಾತ್ಯಕ್ಷಿಕೆ’ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಎಚ್ಚರವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.

ರಸ್ತೆಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಲ್ಲಿ ಸಕಾಲದಲ್ಲಿ ತೆರವುಗೊಳಿಸಬೇಕು. ಹಾಗೆಯೇ, ಬರೆ ಕುಸಿತ ಉಂಟಾದಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಸಾರಿಗೆ ಸಂಪರ್ಕ ಮತ್ತಿತರ ವ್ಯತ್ಯಯಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯವಾಗಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜುಲೈ ಅಂತ್ಯದೊಳಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದೂ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಅವರು ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಭಾಗವಹಿಸಿದ್ದರು.

ಪ್ರಾಕೃತಿಕ ವಿಕೋಪ ಸಂಬಂಧ ಮಡಿಕೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು
ಪ್ರಾಕೃತಿಕ ವಿಕೋಪ ಸಂಬಂಧ ಮಡಿಕೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

ಜುಲೈ ಅಂತ್ಯದೊಳಗೆ ಜಿಲ್ಲೆಗೆ ಕಂದಾಯ ಸಚಿವರ ಭೇಟಿ ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರ ವಹಿಸಲು ನಿರ್ದೇಶನ ಅವಘಡ ಉಂಟಾದ ತಕ್ಷಣ ಸ್ಪಂದಿಸಲು ಸೂಚನೆ

ತಾಲ್ಲೂಕು ಗ್ರಾಮಮಟ್ಟದಲ್ಲಿ ಸಭೆ ನಡೆಸಲು ಸೂಚನೆ

‘ಪ್ರಾಕೃತಿಕ ವಿಕೋಪ ಸಂಬಂಧ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಮಳೆಗೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಹವಾಮಾನ ಮುನ್ಸೂಚನೆ ಬಗ್ಗೆ ಕಾಲ ಕಾಲಕ್ಕೆ ತಹಶೀಲ್ದಾರ್‌ಗಳು ಮಾಹಿತಿ ಹಂಚಿಕೊಳ್ಳಬೇಕು. ತಮ್ಮ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯ ಹಂತದಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಹಾಗೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಭೆಗಳನ್ನು ನಡೆಸಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು ಎಂದು ಅವರು ನಿರ್ದೇಶನ ನೀಡಿದರು. ಪ್ರಾಕೃತಿಕ ವಿಕೋಪ ಎದುರಿಸಲೆಂದೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜೊತೆಗೆ ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT