ಸಿದ್ದಾಪುರ: ‘ಜನಪರ ಕೆಲಸ ಮಾಡಿರುವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಬಿನ್ ದೇವಯ್ಯ ಕರೆ ನೀಡಿದರು.
ಸಿದ್ದಾಪುರದ ಚರ್ಚ್ ಹಾಲ್ ಸಭಾಂಗಣದಲ್ಲಿ ಶಕ್ತಿಕೇಂದ್ರ ವತಿಯಿಂದ ಬಿಜೆಪಿ ಕಾರ್ಯಕರ್ತರ ಮಹಾಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿದ್ದು, ಜನಪರ ಆಡಳಿತ ನೀಡಿದೆ. ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದೆ. ಜಿಲ್ಲೆಯಲ್ಲೂ ಗ್ರಾಮೀಣ ರಸ್ತೆಯ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಪ್ರಗತಿ ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಕರೆ ನೀಡಿದರು.
ಮುಖಂಡ ಗಣೇಶ್ ಕಾರ್ಣಿಕ್ ಮಾತನಾಡಿ, ‘ಕೇಂದ್ರ ಸರ್ಕಾರವು ಸಂಕಷ್ಟದಲ್ಲಿರುವ ರೈತರ ಖಾತೆಗೆ ಹಣ ಜಮೆ ಮಾಡಿದೆ. ಜನಪರ ಆಡಳಿತ ನೀಡಿದ ಬಿಜೆಪಿ ಜೊತೆ ನಾಡಿನ ಜನತೆ ಇದೆ’ ಎಂದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ‘ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯವನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು. ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಮಾಡಿ, ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಜನರು ಇದಕ್ಕೆ ತಕ್ಕ ಉತ್ತರ ನೀಡಬೇಕು’ ಎಂದರು.
ಇದಕ್ಕೂ ಮೊದಲು ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭ ವಿರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ರೀನಾ ತುಳಸಿ, ತಾಲ್ಲೂಕು ವಕ್ತಾರ ಅಜಿತ್ ಕರುಂಬಯ್ಯ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರವೀಣ್, ಗಿರೀಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.