ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡು ಪ್ರಾಣಿಗಳ ದಾಳಿ: ಹೆಚ್ಚಿನ ಪರಿಹಾರ

ಸಿ.ಎಂ ಬಿಎಸ್‌ವೈ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ
Last Updated 6 ನವೆಂಬರ್ 2020, 12:06 IST
ಅಕ್ಷರ ಗಾತ್ರ

ಮಡಿಕೇರಿ: ‘ಕಾಡಾನೆ ಸೇರಿದಂತೆ ಕಾಡುಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರ ನೀಡಬೇಕೆಂಬುದು ರೈತರ ಬೇಡಿಕೆಯಾಗಿದ್ದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಆನೆ ಹಾಗೂ ಮಾನವ ಸಂಘರ್ಷ ತೀವ್ರವಾಗಿದೆ. ಆನೆ ದಾಳಿಯಿಂದ ಜೀವಹಾನಿ ಹಾಗೂ ಕಾಫಿ ತೋಟ ನಾಶವಾಗುತ್ತಿದೆ. ರೈತರ ಪ್ರತಿಭಟನೆ ಮತ್ತಿತರ ಕಾರಣಕ್ಕೆ ಕಾನೂನು ಸುವ್ಯವಸ್ಥೆಯ ಸಮಸ್ಯೆ ಆಗಲಿದೆ. ಆಗ ಪೊಲೀಸರೇ ಪರಿಸ್ಥಿತಿ ನಿಭಾಯಿಸಬೇಕು. ಆದ್ದರಿಂದ, ಪರಿಹಾರ ಹೆಚ್ಚಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಜೊತೆಗೆ ಚರ್ಚಿಸುತ್ತೇನೆ. ಆದಷ್ಟು ಬೇಗ ತೀರ್ಮಾನ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಕೊಡಗಿನಲ್ಲಿ ಹೋಂಸ್ಟೇ ಹಾಗೂ ರೆಸಾರ್ಟ್‌ಗಳಿವೆ. ಅಲ್ಲಿ ವಾರಾಂತ್ಯದಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯಕೂಡದು. ನಿಗಾ ವಹಿಸುವಂತೆಯೂ ಪೊಲೀಸರಿಗೆ ಸೂಚಿಸಿದ್ದೇನೆ. ಡ್ರಗ್ಸ್‌ ಮುಕ್ತ ರಾಜ್ಯಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಕೋವಿಡ್‌–19 ಹಾಗೂ ಭೂಕುಸಿತದ ಸಂದರ್ಭದಲ್ಲಿ ಜಿಲ್ಲೆಯ ಪೊಲೀಸರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಕಾಪಾಡಿಕೊಂಡು, ಕೆಲಸ ಮಾಡಿದ್ದು ವಿಶೇಷ. ತೊಂದರೆಯಲ್ಲಿದ್ದ ಜನರಿಗೆ ನೆರವು ನೀಡಿದ್ದಾರೆ. ಇಲಾಖೆ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯು ಗುಡ್ಡಗಾಡು ಪ್ರದೇಶ. ಮನೆಗಳೂ ದೂರ ದೂರ ಇವೆ. ಈ ಭೌಗೋಳಿಕ ಪ್ರದೇಶದಲ್ಲಿ ಪೊಲೀಸರಿಗೆ ಕರ್ತವ್ಯ ನಿರ್ವಹಣೆ ಮಾಡುವುದು ಸವಾಲು. ಅದನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಬಂಧನವಾಗಿರುವ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕು. ತನಿಖೆಯಲ್ಲಿ ಲೋಪದೋಷ ಆಗಬಾರದು. ತನಿಖೆ ಉತ್ತಮವಾಗಿರಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.

ಜಿಲ್ಲಾವಾರು ಪರಿಶೀಲನೆ:ಸರ್ಕಾರ ರಚನೆಯಾದ ಆರಂಭದಲ್ಲಿ ವಲಯವಾರು ಪೊಲೀಸ್‌ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ್ದೇನೆ. ಇದೀಗ ಜಿಲ್ಲಾವಾರು ಪರಿಶೀಲನೆ ನಡೆಸುತ್ತಿದ್ದೇನೆ. ಕೊಡಗು ಜಿಲ್ಲೆಯ ಅಪರಾಧ ಪ್ರಕರಣಗಳ ಪತ್ತೆ ಹಚ್ಚುವಿಕೆ, ಜಿಲ್ಲೆಯ ಕಾನೂನು ಸುವ್ಯವಸ್ಥೆ, ಇಲಾಖೆ ಕಟ್ಟಡಗಳ ಸ್ಥಿತಿಗತಿ ಹಾಗೂ ಸಿಬ್ಬಂದಿ ಮಾಹಿತಿ ಪಡೆದುಕೊಂಡಿರುವೆ ಎಂದು ಗೃಹ ಸಚಿವರು ಹೇಳಿದರು.

ನೇಮಕಾತಿ:ಸಿವಿಲ್‌ ಹಾಗೂ ಡಿಎಆರ್‌ ಘಟಕದಲ್ಲಿ ಕೆಲವು ಸಿಬ್ಬಂದಿ ಕೊರತೆಯಿದೆ. ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು. ಈ ವರ್ಷ ಶೇ 70ರಷ್ಟು ಸಿಬ್ಬಂದಿ ನೇಮಕಾತಿ ಮಾಡಲಾಗುವುದು. ಕೊಡಗು ಜಿಲ್ಲೆಯ ಪೊಲೀಸ್‌ ಇಲಾಖೆಯನ್ನು ಬಲಪಡಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ವಲಯದ ಪೊಲೀಸ್‌ ಮಹಾನಿರ್ದೇಶಕ ವಿಪುಲ್‌ ಕುಮಾರ್, ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT