ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರವಸೆ ಈಡೇರಿಸದ ಕೇಂದ್ರ: ಕಾಂಗ್ರೆಸ್‌ ಆಕ್ರೋಶ

ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ
Last Updated 13 ನವೆಂಬರ್ 2019, 11:48 IST
ಅಕ್ಷರ ಗಾತ್ರ

ಮಡಿಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ಬರೀ ಭಾವನಾತ್ಮಕ ವಿಚಾರಗಳನ್ನೇ ಕೆದಕಿ ರಾಜಕಾರಣ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲೂ ಇದೇ ವಿಷಯವನ್ನು ಮುಂದಿಟ್ಟುಕೊಂಡು, ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ಮೇಲೆ ಎಲ್ಲ ವಾಗ್ದಾನ ಮರೆತಿದೆ ಎಂದು ಕಾಂಗ್ರೆಸ್‌ ಮುಖಂಡರು ದೂರಿದರು.

‘2014ರ ಚುನಾವಣೆಗೂ ಮೊದಲು ತಮಗೆ ಅಧಿಕಾರ ನೀಡಿದರೆ ವಿದೇಶದಲ್ಲಿರುವ ಕಪ್ಪುಹಣವನ್ನು ಸ್ವದೇಶಕ್ಕೆ ತರುತ್ತೇವೆ ಎಂದು ಭರವಸೆ ನೀಡಿದ್ದರು. ಪ್ರತಿಪ್ರಜೆಯ ಬ್ಯಾಂಕ್‌ ಖಾತೆಗೆ ₹ 15 ಲಕ್ಷ ಹಣ ಹಾಕಲಾಗುವುದೆಂದು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಹಣವೂ ಬಂದಿಲ್ಲ’ ಎಂದು ಹೇಳಿದರು.

‘ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಆಗುತ್ತಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ನೀಡಲಾಗಿದ್ದ ಭರವಸೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ರೈತರು ಬೆಳೆದ ಬೆಲೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುತ್ತೇವೆ ಎಂದು ಮಾತು ಸಹ ಹುಸಿಯಾಗಿದೆ. ಅನ್ನದಾತರು ಇಂದಿಗೂ ಕಣ್ಣೀರಿನಲ್ಲೇ ಕೈತೊಳೆಯುತ್ತಿದ್ದಾರೆ’ ಎಂದು ಮುಖಂಡರು ಆಪಾದಿಸಿದರು.

‘2014ರಿಂದ ಐದು ವರ್ಷಗಳ ಕಾಲ ಯಾವುದೇ ಆಶ್ವಾಸನೆ ಈಡೇರಿಸದೇ 2019ರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೈಗೆತ್ತಿಕೊಂಡು, ಬಿಜೆಪಿ ಅಧಿಕಾರಕ್ಕೆ ಬಂದಿದೆ. ನಿರುದೋಗ್ಯ ಸಮಸ್ಯೆ ನಿವಾರಣೆ, ಸಾಮರಸ್ಯ ವೃದ್ಧಿ, ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡದೇ ಮತ್ತೆ, 370ನೇ ವಿಧಿ ರದ್ದು, ವೀರ ಸಾರ್ವಕರ್‌ಗೆ ಭಾರತ ರತ್ನ ಪ್ರಶಸ್ತಿ ನೀಡುವುದು, ಪೌರತ್ವ ವಿಚಾರಗಳನ್ನು ಮುನ್ನೆಲೆಗೆ ತರಲಾಗಿದೆ. ದೇಶ ಆರ್ಥಿಕ ವ್ಯವಸ್ಥೆ ಬುಡಮೇಲಾದರೂ, ಸುಧಾರಣೆಗೆ ಕ್ರಮ ಕೈಗೊಂಡಿಲ್ಲ’ ಎಂದು ಆಪಾದಿಸಿದರು.

‘ರಾಷ್ಟ್ರ ವಿವಿಧ ರಾಜ್ಯಗಳಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಜನರ ಬದುಕು ದುಸ್ತರವಾಗಿದೆ. ರೈತರು ಬೆಳೆದ ಬೆಲೆಗಳಿಗೆ ಸೂಕ್ತ ಬೆಲೆಯೂ ಸಿಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಮಾಡುತ್ತ ಭಾರತ ಸಮೃದ್ಧವಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ದೇಶದ ಪರಿಸ್ಥಿತಿ ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್ ಮಾತನಾಡಿ, 2014ರ ಲೋಕಸಭಾ ಚುನಾವಣೆಗೂ ಮುನ್ನ ಮೋದಿ ಸರ್ಕಾರ ನೀಡಿದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರದ ರಕ್ಷಣೆ, ಜಾತಿ ಧರ್ಮ, ತ್ರಿವಳಿ ತಲಾಖ್ ರದ್ದು, ರಾಮಮಂದಿರ, ಮಸೀದಿಯಂಥ ಅನೇಕ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತ್ತೆ ಅಧಿಕಾರಕ್ಕೆ ಬಂದರು. ಆದರೆ, ಯಾವುದೇ ಮಹತ್ವದ ಕಾರ್ಯಕ್ರಮಗಳನ್ನು ನೀಡದೆ ಆರ್‌ಸಿಇಪಿಯಂತಹ ವಿಚಾರಗಳನ್ನು ಪ್ರಸ್ತಾಪಿಸುತ್ತಾ ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಆಗುವಂತೆ ಮಾಡಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ವೆಂಕಪ್ಪಗೌಡ, ಟಿ.ಪಿ.ರಮೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಅಬ್ದುಲ್ ರಜಾಕ್, ಕುಮುದಾ ಧರ್ಮಪ್ಪ, ತೆನ್ನೀರ ಮೈನಾ, ಸೂರಜ್ ಹೊಸೂರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT