ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್: ಕಾರ್ಯಪಡೆ ರಚನೆ

ಜಿಲ್ಲಾ ಆಸ್ಪತ್ರೆಯಲ್ಲೂ 5 ಹಾಸಿಗೆಯ ಒಂದು ವಿಶೇಷ ವಾರ್ಡ್
Last Updated 1 ಫೆಬ್ರುವರಿ 2020, 13:58 IST
ಅಕ್ಷರ ಗಾತ್ರ

ಮಡಿಕೇರಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ. ಈ ಬಗ್ಗೆ ವೈರಸ್ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಕೋರಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ, ಈ ವೈರಸ್ ಬಗ್ಗೆ ಈಗಾಗಲೇ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿದ್ದು, ಎಚ್ಚರಿಕೆ ವಯಸಬೇಕಿದೆ ಎಂದು ಹೇಳಿದರು.

ಸೋಂಕು ಹರಡುವ ಲಕ್ಷಣ: ವಿಪರೀತ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಬೇಧಿ ವೈರಸ್‌ ಲಕ್ಷಣ. ಸೋಂಕಿತರು ಸೀನಿದಾಗ, ಕೆಮ್ಮಿದಾಗ, ಸೋಂಕಿತರೊಂದಿಗೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ ಈ ರೋಗ ಹರಡಲಿದೆ. ಎಚ್ಚರ ವಹಿಸಬೇಕಿದೆ ಎಂದು ಮೋಹನ್ ತಿಳಿಸಿದರು.

ಕೊರೊನಾ ವೈರಸ್ ಸೋಂಕಿದ ವ್ಯಕ್ತಿಗೆ ಅತಿಸಾರ, ಶೀತ, ಜ್ವರ ಮತ್ತು ಉಸಿರಾಟದ ಸಮಸ್ಯೆಗಳು ಇರುತ್ತವೆ. ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಎಂಬುದಿಲ್ಲ. ಆದರೆ, ಲಕ್ಷಣಾಧಾರಿತವಾಗಿ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಚರಣೆ ತಂಡ ರಚನೆ: ಸೋಂಕಿನ ಬಗ್ಗೆ ಮುಂಜಾಗೃತ ಕ್ರಮ ಕೈಗೊಳ್ಳಲು ಜಿಲ್ಲಾ ಕ್ಷಿಪ್ರ ಕಾರ್ಯಪಡೆ ತಂಡವನ್ನು ನಿಯೋಜಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಯನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆ ತಂಡ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಜಿಲ್ಲಾ ಆಸ್ಪತ್ರೆಯಲ್ಲೂ 5 ಹಾಸಿಗೆಯ ಒಂದು ವಿಶೇಷ ವಾರ್ಡ್ ತೆರೆಯಲಾಗಿದೆ. ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ 2 ಹಾಸಿಗೆಗಳನ್ನು ಕೊರೊನ ವೈರಸ್ ಪೀಡಿತರಿಗಾಗಿಯೇ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

ಪ್ರವಾಸಿ ತಾಣವಾದ ರಾಜಾಸೀಟ್‌ನಲ್ಲಿ ಕೊರೊನಾ ವೈರಸ್ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಭಿತ್ತಿಪತ್ರವನ್ನು ಟಿಕೆಟ್ ಜೊತೆಗೆ ನೀಡಲೂ ಸಹ ವ್ಯವಸ್ಥೆ ಮಾಡಿಕೊಂಡಿರುವುದಾಗಿ ತಿಳಿಸಿದರು.

ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ವಿಚಾರಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದರು.

ಬೇಯಿಸಿದ ಮಾಂಸಾಹಾರ ಸೇವೆಸಬೇಕು. ಹಸಿ ಮಾಂಸಗಳನ್ನು ಮುಟ್ಟಿದ ನಂತರ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು. ಜ್ವರ ಮತ್ತು ಶೀತದ ಸಮಸ್ಯೆಗಳಿದ್ದರೆ ಶೀಘ್ರವೇ ಹತ್ತಿತರದ ಆಸ್ಪತ್ರೆಗೆ ಭೇಟಿ ನೀಡುವಂತೆ ಮನವಿ ಮಾಡಿದರು.

ಪ್ರತಿ ವಿಮಾನ ನಿಲ್ದಾಣದಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ ವೈರಸ್ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಮತ್ತು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯನ್ನು ಚಿಕಿತ್ಸೆಗಾಗಿ ಮೀಸಲಿರಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಕಾಲೇಜಿನ ಅಧೀಕ್ಷಕ ಡಾ.ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ. ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾದಿಕಾರಿ ಡಾ.ಆನಂದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT