ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಗಂಭೀರ ಸ್ಥಿತಿ: ಎಂಎಲ್‌ಸಿ ವೀಣಾ ಅಚ್ಚಯ್ಯ

ಜಿಲ್ಲೆಯ ಅಧಿಕಾರಿಗಳಿಂದ ಜನಪ್ರತಿನಿಧಿಗಳ ಕಡೆಗಣನೆ:
Last Updated 10 ಮೇ 2021, 13:57 IST
ಅಕ್ಷರ ಗಾತ್ರ

ಮಡಿಕೇರಿ: ಕೋವಿಡ್ ಸಂದಿಗ್ಧ ಪರಿಸ್ಥಿತಿಯಿಂದ ಕೊಡಗು ಜಿಲ್ಲೆ ಆತಂಕದ ದಿನಗಳನ್ನು ಎದುರಿಸುತ್ತಿರುವ ಈ ದಿನಗಳಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವ ಅನಿವಾರ್ಯತೆಯಿದೆ. ಆದರೆ, ಜಿಲ್ಲೆಯ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಕಡೆಗಣಿಸಿ ತಮಗಿಷ್ಟ ಬಂದಂತೆ ನಿಯಮಗಳನ್ನು ರೂಪಿಸಿ ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.

ಕೋವಿಡ್‌ನ 2ನೇ ಅಲೆ ವ್ಯಾಪಿಸುವ ಬಗ್ಗೆ ಮುನ್ಸೂಚನೆ ಇದ್ದರೂ ಸರ್ಕಾರ ತೋರಿದ ನಿರ್ಲಕ್ಷ್ಯದಿಂದ ರಾಜ್ಯವು ಈಗ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸರ್ಕಾರ ಮಾಡಿದ ತಪ್ಪಿಗೆ ಜನರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಟೀಕಿಸಿದರು.

ಈಗ ಹದಗೆಟ್ಟಿರುವ ಪರಿಸ್ಥಿತಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸ್ವಪ್ರತಿಷ್ಠೆಯನ್ನು ಬದಿಗಿಟ್ಟು ಶ್ರಮಿಸಬೇಕಾಗಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಅಧಿಕಾರಿಗಳು ರೂಪಿಸಿದ್ದೇ ಕಾನೂನು ಎಂಬಂತ್ತಾಗಿದೆ. ಜನಪ್ರತಿನಿಧಿಗಳನ್ನು ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಘ, ಸಂಸ್ಥೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಇಲ್ಲಿನ ಭೌಗೋಳಿಕ ಸ್ಥಿತಿಗೆ ವಿರುದ್ಧವಾದ ನಿಯಮಗಳನ್ನು ಹೇರಲಾಗುತ್ತಿದೆ. ಕೋವಿಡ್ ಸೋಂಕಿನ ಆತಂಕವನ್ನು ಎದುರಿಸುತ್ತಿರುವ ಜನರು ಅಗತ್ಯ ವಸ್ತುಗಳು ಸಿಗದೇ ಹೋಗಬಹುದು ಎನ್ನುವ ಗೊಂದಲದಲ್ಲೂ ಇದ್ದಾರೆ. ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ವರ್ಷ ಜಿಲ್ಲಾಡಳಿತ ಜನಪ್ರತಿನಿಧಿಗಳ ಸಲಹೆಯನ್ನು ಪಡೆದುಕೊಂಡೇ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ, ಪ್ರಸ್ತುತ ವರ್ಷ ಸಂಪೂರ್ಣ ವಿಫಲತೆಯನ್ನು ಕಾಣುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವೆಂದು ಆದೇಶಿಸಲಾಗಿತ್ತು. ಆದರೆ, ದಿಢೀರ್ ಆಗಿ ಇದನ್ನು ಬದಲಿಸಿ ಸೋಮವಾರ ಅವಕಾಶವಿದೆ. ಮಂಗಳವಾರ ಇಲ್ಲವೆಂದು ಜಿಲ್ಲಾಡಳಿತ ಸ್ಪಷ್ಟೀಕರಣ ನೀಡಿತು. ಇದರಿಂದ ಜಿಲ್ಲೆಯ ಜನರು ಹಾಗೂ ವ್ಯಾಪಾರಿಗಳು ಗೊಂದಲಕ್ಕೆ ಸಿಲುಕಿದರು. ಅಲ್ಲದೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡದೆ ಇರುವುದರಿಂದ ಜನರು ಹತ್ತಾರು ಕಿ.ಮೀ ದೂರದವರೆಗೆ ಕಾಲ್ನಡಿಗೆಯಲ್ಲೇ ಸಾಗುವಂತೆ ಮಾಡಿದೆ. ಇದರಿಂದ ವಯೋವೃದ್ಧರು, ಮಹಿಳೆಯರು ಭಾರದ ವಸ್ತುಗಳನ್ನು ಕೊಂಡೊಯ್ಯಲು ಸಾಧ್ಯವಗದೆ ಕಷ್ಟಪಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಷ್ಟೋ ಕಿ.ಮೀ ದೂರದಲ್ಲಿ ವಾಹನಗಳನ್ನು ನಿಲುಗಡೆಗೊಳಿಸಿ ಕಾಲ್ನಡಿಯಲ್ಲಿ ವಸ್ತುಗಳನ್ನು ಕೊಳ್ಳಲು ಬಂದರೆ ಕೋವಿಡ್ ಸೋಂಕು ಬರುವುದಿಲ್ಲವೇ ಎಂದು ವೀಣಾ ಅಚ್ಚಯ್ಯ ಪ್ರಶ್ನಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿಗಳು, ಮೆಡಿಕಲ್ ಕಾಲೇಜ್ ಡೀನ್ ಸೇರಿದಂತೆ ವೈದ್ಯಕೀಯ ವರ್ಗ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಇವರ ಕಾರ್ಯಕ್ಕೆ ಪೂರಕವಾದ ಸರ್ಕಾರಿ ವ್ಯವಸ್ಥೆಗಳಿಲ್ಲ. ಕೇವಲ ಜನರಿಗೆ ತೊಂದರೆ ನೀಡುವ ಮಾರ್ಗಸೂಚಿಗಳನ್ನಷ್ಟೇ ಜಿಲ್ಲಾಡಳಿತ ಪ್ರಕಟಿಸುತ್ತಿದೆ ಎಂದು ಟೀಕಿಸಿರುವ ವೀಣಾ ಅಚ್ಚಯ್ಯ, ಜಿಲ್ಲಾ ಉಸ್ತುವಾರಿ ಸಚಿವರು ಮೊದಲು ಜಿಲ್ಲಾಡಳಿತವನ್ನು ಹಿಡಿತಕ್ಕೆ ತೆಗೆದುಕೊಳ್ಳಬೇಕು ಮತ್ತು ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಸಿಬ್ಬಂದಿಗಳ ಕೊರತೆಯ ನಡುವೆಯೂ ಪೊಲೀಸರು ಉತ್ತಮ ರೀತಿಯಲ್ಲಿ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸರ್ಕಾರದ ಆದೇಶಗಳಿಂದ ಅವರು ಕೂಡ ಅಸಹಾಯಕರಾಗಿದ್ದು, ಜನರಿಂದಲೂ ನಿಂದನೆಗೆ ಒಳಗಾಗುತ್ತಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಜನಪರವಾದ ನಿಲುವುಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆದೇಶಿಸಬೇಕು ಮತ್ತು ಕೋವಿಡ್ ನಿರ್ಮೂಲನೆಗೆ ಎಲ್ಲರೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದು ವೀಣಾಅ ಚ್ಚಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT