ಶನಿವಾರ, ಮೇ 21, 2022
27 °C
ಜಿಲ್ಲೆಯಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳು ಏರಿಕೆ

ಕೊಡಗು: 34 ವಿದ್ಯಾರ್ಥಿಗಳು ಸೇರಿ 49 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ವಿದ್ಯಾರ್ಥಿಗಳೂ ಸೇರಿ 49 ಮಂದಿಗೆ ಒಂದೇ ದಿನ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಮೊರಾರ್ಜಿ ದೇಸಾಯಿ ಶಾಲೆಯ 25 ವಿದ್ಯಾರ್ಥಿಗಳಿಗೆ ಕೋವಿಡ್ ದೃಢವಾಗಿದೆ. ಶಾಲೆಯ 8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಶಾಲೆಯ ಎಲ್ಲ 210 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 75 ವಿದ್ಯಾರ್ಥಿಗಳ ವರದಿ ಬಂದಿದ್ದು, 25 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. 135 ವಿದ್ಯಾರ್ಥಿಗಳ ವರದಿ ಬರಲು ಬಾಕಿಯಿದೆ. 

ಶಾಲೆಗೆ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಒಂದು ವಾರ ಶಾಲೆ ಬಂದ್‌ ಮಾಡಲು ಸೂಚಿಸಿದ್ಧಾರೆ ಎಂದು ಶಿಕ್ಷಕರು ಮಾಹಿತಿ ನೀಡಿದರು. 

ಮಡಿಕೇರಿಯಲ್ಲಿರುವ ಕೊಡಗು ವಿದ್ಯಾಲಯದ 9 ವಿದ್ಯಾರ್ಥಿಗಳಿಗೆ ಮತ್ತೆ ಕೋವಿಡ್‌ ದೃಢಪಟ್ಟಿದೆ. ಕಳೆದ ವಾರ 11 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಉಳಿದಂತೆ ಜಿಲ್ಲೆಯ ವಿವಿಧ ಗ್ರಾಮಗಳ 15 ಮಂದಿಗೆ ಸೋಂಕು ತಗುಲಿದೆ. 

‘ಮೊರಾರ್ಜಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ವಿದ್ಯಾರ್ಥಿಗಳನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತಂಕ ಪಡುವ ಅಗತ್ಯ ಇಲ್ಲ’ ಎಂದು ಡಿಎಚ್‌ಒ ಡಾ.ವೆಂಕಟೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು