ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಅಪಘಾತಗಳ ಕಡಿವಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಹೆಚ್ಚುತ್ತಿರುವ ಸಾವು, ನೋವು; ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ
Last Updated 23 ಜೂನ್ 2022, 16:34 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತಗಳು ಇಲ್ಲಿ ಗುರುವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಪ್ರಧಾನವಾಗಿ ಚರ್ಚೆಗೆ ಬಂದಿತು. ಅಪಘಾತಗಳ ನಿಯಂತ್ರಣಕ್ಕೆ ಕೂಡಲೇ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಕುಶಾಲನಗರದಿಂದ ಸಂಪಾಜೆವರೆಗಿನ ರಾಷ್ಟ್ರೀಯ ಹೆದ್ದಾರಿಯ (275) ನಗರದ ಚೈನ್‍ಗೇಟ್ ಬಳಿ ಇತ್ತೀಚೆಗೆ ಕಾರ್ಮಿಕರೊಬ್ಬರು ಬೈಕ್‍ನಲ್ಲಿ ಸಂಚರಿಸುತ್ತಿದ್ದಾಗ ಅಪಘಾತದಿಂದ ಮೃತಪಟ್ಟರು. ಹೀಗೆ, ಹಲವು ಮಂದಿ ಅಪಘಾತಗಳಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ಸುರಕ್ಷತೆ ಸಂಬಂಧ ಕ್ರಮವಹಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.

ಅಗತ್ಯವಿರುವ ಕಡೆ ಉಬ್ಬುಗಳ ನಿರ್ಮಾಣ, ಜೀಬ್ರಾ ಕ್ರಾಸ್ ಹಾಗೂ ರಸ್ತೆ ಸುರಕ್ಷತಾ ಸೂಚನಾ ಫಲಕ ಅಳವಡಿಸಬೇಕು. ಇಷ್ಟೆಲ್ಲ ಅಪಘಾತಗಳನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದೂ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಕಡೆಗಳಲ್ಲಿಯೂ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಪ್ರತಿಕ್ರಿಯಿಸಿ, ‘ಮಡಿಕೇರಿ ಸೇರಿದಂತೆ ಇತರೆಡೆಗಳಲ್ಲಿ ಅಪಘಾತ ವಲಯಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳು ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು’ ಎಂದರು.

ಖಾಸಗಿ ಬಸ್‌ ಸಂಚಾರಕ್ಕೆ ತೊಂದರೆ; ಮಾಲೀಕರ ಅಳಲು

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಮಾತನಾಡಿ,‘ ಕಾಲೇಜು ರಸ್ತೆಯಲ್ಲಿ ವಾಹನ ನಿಲುಗಡೆಗೆ ವೇಳೆ ನಿಗದಿ ಮಾಡಬೇಕು. ವಾರಾಂತ್ಯದಲ್ಲಿ ರಾಜಸೀಟು ಮಾರ್ಗದಲ್ಲಿ ಪ್ರವಾಸಿಗರು ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆ ಮಾಡುವುದರಿಂದ ಖಾಸಗಿ ಬಸ್ ಓಡಾಟಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಕ್ರಮವಹಿಸಬೇಕು’ ಎಂದು ಮನವಿ ಮಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪಿ.ಆರ್.ರಾಜಗೋಪಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೇದಮೂರ್ತಿ, ಪೌರಾಯುಕ್ತ ಎಸ್.ವಿ.ರಾಮದಾಸ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ವಿ.ಶಿವರಾಮ್, ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಜಿ.ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನಾ ನಾಯಕ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಿಸಿನ್ ಪಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT