ಮಡಿಕೇರಿ: ‘ಕೊಡಗು ಜಿಲ್ಲೆಯಲ್ಲಿರುವ ಎಲ್ಲ ಹೋಂಸ್ಟೇಗಳು ಹಾಗೂ ರೆಸಾರ್ಟ್ ಮಾಲೀಕರು ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಅವರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್‍ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು.
‘ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು’ ಎಂದರು.
‘ಮತದಾನದ 48 ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆ ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ, ಅವು ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು’ ಎಂದರು.
ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಜಿ ಕೆ.ಕೆ.ಭಾಸ್ಕರ್, ಹೋಂ ಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ ಮೋಂತಿ ಗಣೇಶ್, ನಿರ್ದೇಶಕರಾದ ಅಂಬೇಕಲ್ ನವೀನ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಇದ್ದರು.
ಮಕ್ಕಳ ಬಳಕೆ ನಿಷೇಧ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.