ಮಡಿಕೇರಿ: ಈಗಾಗಲೇ ಅನುಮೋದನೆ ದೊರೆತಿರುವ ಗಾಂಧಿ ಸ್ಮಾರಕ ಉದ್ಯಾನದ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನಂತರ, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದರು.
ಇಲ್ಲಿನ ಗಾಂಧಿ ಸ್ಮಾರಕ ಉದ್ಯಾನ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಮೇಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಕ್ಟೋಬರ್ 2 ರೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಈಗಾಗಲೇ ಅನುಮತಿ ನೀಡಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನ ಒದಗಿಸಲಾಗಿದ್ದು, ಅದಕ್ಕೆ ಅನುಮೋದನೆ ನೀಡಲಾಗಿದೆ. ಕಾಮಗಾರಿಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅನುಮೋದನೆ ದೊರೆತಿರುವ ಕಾಮಗಾರಿ ಪೂರ್ಣಗೊಳಿಸಿದ ನಂತರ ಹೆಚ್ಚಿನ ಅನುದಾನದ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿ ಪ್ರಸ್ತುತ ಕಾಮಗಾರಿಯನ್ನು ಕುಂಠಿತಗೊಳಿಸುವ ಕ್ರಮ ಆಗಬಾರದು ಎಂದು ಹೇಳಿದರು.
ಪರಿಶೀಲನೆಯ ಸಮಯದಲ್ಲಿ ಶಾಸಕ ಡಾ.ಮಂತರ್‌ಗೌಡ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಸರ್ವೋದಯ ಸಮಿತಿ ಸದಸ್ಯರು ಭಾಗವಹಿಸಿದ್ದರು.