ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂದಿನ ವರ್ಷ ಎಲ್.ಕೆ.ಜಿ. ಆರಂಭಿಸಲು ಕ್ರಮ: ಶಾಸಕ ಡಾ.ಮಂತರ್ ಗೌಡ

ವಿದ್ಯಾರ್ಥಿಗಳಿಗೆ ನೋಟ್‌ ಬುಕ್, ಲೇಖನ ಸಾಮಗ್ರಿ ವಿತರಣೆ
Published 20 ಜೂನ್ 2024, 16:21 IST
Last Updated 20 ಜೂನ್ 2024, 16:21 IST
ಅಕ್ಷರ ಗಾತ್ರ

ಕುಶಾಲನಗರ: ‘ಮುಂದಿನ ಶೈಕ್ಷಣಿಕ ಸಾಲಿನಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ತರಗತಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.

ಸಮೀಪದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಪುರಸಭೆ ನಾಮನಿರ್ದೇಶಿತ ಸದಸ್ಯ ವಿ.ಪಿ.ನವೀನ್ ಕುಮಾರ್ ಹಾಗೂ ಗುತ್ತಿಗೆದಾರ ಅನಿಲ್ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸಲು ಶಿಕ್ಷಕರು ಹಾಗೂ ಸಾರ್ವಜನಿಕರು ಶ್ರಮಿಸಬೇಕು’ ಎಂದರು.

‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಉಚಿತ ಸಮವಸ್ತ್ರ, ಪಠ್ಯ ಪುಸ್ತಕ, ಮಧ್ಯಾಹ್ನ ಬಿಸಿಯೂಟ, ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜೊತೆಗೆ ಶಾಲೆಗಳಿಗೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದು ಮನವಿ ಮಾಡಿದರು.

ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಮುಖಂಡರಾದ ರಮೇಶ್, ಕುಮಾರ್ ಸ್ವಾಮಿ, ಸದಸ್ಯರಾದ ವಿ.ಟಿ.ಪಾರ್ವತಿ ಪದ್ಮ, ಮುಖಂಡರಾದ ಎಂ.ಎಂ.ಪ್ರಕಾಶ್, ರಂಜನ್ ಹೆಬ್ಬಾಲೆ, ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ, ಸಹ ಶಿಕ್ಷಕರು ಶಿವಲಿಂಗು ರಾಗಿಣಿ, ಮೇರಿ, ಎಚ್.ಕೆ.ವಿಜಯವಾಣಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT