ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ: 18ರಂದು ಬೆಳಿಗ್ಗೆ 7ರಿಂದ ಮತದಾನ ಆರಂಭ

ಶುಕ್ರವಾರ, ಏಪ್ರಿಲ್ 26, 2019
36 °C
ಲೋಕಸಭಾ ಚುನಾವಣೆ

ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ: 18ರಂದು ಬೆಳಿಗ್ಗೆ 7ರಿಂದ ಮತದಾನ ಆರಂಭ

Published:
Updated:
Prajavani

ಮಡಿಕೇರಿ: ಲೋಕಸಭಾ ಚುನಾವಣೆಯ ಮತದಾನವು ಏ.18ರಂದು ಬೆಳಿಗ್ಗೆ 7ರಿಂದ ಸಂಜೆ 6ರ ತನಕ ನಡೆಯಲಿದ್ದು ಕೊಡಗು ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಕೊಡಗು ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿದ್ದು, 543 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಾಂತಿಯುತ ಮತದಾನಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಕ್ಸಲ್‌ ಚಲನವಲನವಿರುವ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿದ್ದಾರೆ. ಜಿಲ್ಲೆಯಲ್ಲಿ 144 ಕಾಡಾನೆ ಸಂಘರ್ಷವುಳ್ಳ ಮತಗಟ್ಟೆಗಳಿದ್ದು ಅಲ್ಲಿಯೂ ಅರಣ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿದ್ದಾರೆ.

ಕೊಡಗು ಜಿಲ್ಲೆಯು ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು ಮೈತ್ರಿಕೂಟ (ಜೆಡಿಎಸ್‌– ಕಾಂಗ್ರೆಸ್‌) ಅಭ್ಯರ್ಥಿಯಾಗಿ ಸಿ.ಎಚ್‌. ವಿಜಯಶಂಕರ್‌ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ ಸಿಂಹ ಸೇರಿ 22 ಅಭ್ಯರ್ಥಿಗಳು ಕಣದಲ್ಲಿದ್ದು ತಮ್ಮ ಅದೃಷ್ಟವನ್ನು ಪರೀಕ್ಷೆಗೆ ಒಡ್ಡಿಕೊಂಡಿದ್ದಾರೆ.     

ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಮತದಾನಕ್ಕೆ ಮುನ್ನ ದಿನವಾದ ಬುಧವಾರ ಮಡಿಕೇರಿ ಸಂತ ಜೋಸೆಫ್‌ ಶಾಲೆ ಮತ್ತು ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಮಸ್ಟರಿಂಗ್ ಕಾರ್ಯ ನಡೆಯಿತು. ಮತಗಟ್ಟೆ ಸಿಬ್ಬಂದಿ ಇ.ವಿ.ಎಂ., ವಿ.ವಿ ಪ್ಯಾಟ್ ಹಾಗೂ ಕಂಟ್ರೋಲ್ ಯುನಿಟ್‌ ಹಿಡಿದು ಜಿಲ್ಲೆಯ ವಿವಿಧ ಮತಗಟ್ಟೆಗಳತ್ತ ಹೊರಟರು. ಅದಕ್ಕಾಗಿಯೇ ಕೆಎಸ್‌ಆರ್‌ಟಿಸಿ ಬಸ್‌ಗಳು ಸಜ್ಜಾಗಿದ್ದವು. ಬುಧವಾರ ಸಂಜೆಯ ವೇಳೆಗೆ ಮತಗಟ್ಟೆ ತಲುಪಿದ ಅಧಿಕಾರಿಗಳು ಗುರುವಾರದ ಮತದಾನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡರು.   

ಸಂತ ಜೋಸೆಫ್‌ ಶಾಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರ ಮೇಲ್ವಿಚಾರಣೆಯಲ್ಲಿ ಹಾಗೂ ವಿರಾಜಪೇಟೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರ ಮೇಲ್ವಿಚಾರಣೆಯಲ್ಲಿ ಮಸ್ಟರಿಂಗ್‌ ನಡೆಯಿತು.

ವಿರಾಜಪೇಟೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಮಡಿಕೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ನೇತೃತ್ವ ವಹಿಸಿದ್ದರು.    

ಮತಗಟ್ಟೆಗಳಿಗೆ ತೆರಳುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು, ಪೋಲಿಂಗ್ ಅಧಿಕಾರಿಗಳು, ಪೊಲೀಸರು ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಮಾಹಿತಿ ನೀಡಲು ಪ್ರತ್ಯೇಕವಾಗಿ ಕೌಂಟರ್‌ ತೆರೆಯಲಾಗಿತ್ತು.

ಫ್ಲೈಯಿಂಗ್ ಸ್ಕ್ವಾಡ್, ವಿಡಿಯೊ ವ್ಯೂವಿಂಗ್, ವಿಡಿಯೊ ಸರ್ವಿಲೆನ್ಸ್, ಚೆಕ್‌ಪೋಸ್ಟ್, ಸೆಕ್ಟರ್ ಅಧಿಕಾರಿಗಳು, ಮೈಕ್ರೊ ವೀಕ್ಷಕರು, ಸಂಚಾರಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು.  

ಜಿಲ್ಲೆಯ ಎಲ್ಲ ಮತಗಟ್ಟೆಗಳಿಗೆ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತದಾರರು ನಿರ್ಭೀತಿಯಿಂದ ಮತಹಕ್ಕು ಚಲಾಯಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಇದಲ್ಲದೇ ಜಿಲ್ಲಾ ಶಸಸ್ತ್ರ ಪಡೆ, ಪ್ರತಿ ಮತಗಟ್ಟೆಗಳಲ್ಲಿ ಪೊಲೀಸ್ ಅಥವಾ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್ ಹೇಳಿದರು.

ಬಂದೋಬಸ್ತ್‌: ಮೂವರು ಡಿವೈಎಸ್‌ಪಿ, 36 ಪಿಎಸ್‌ಐ, 1200 ಕಾನ್‌ಸ್ಟೆಬಲ್‌, 500 ಗೃಹರಕ್ಷಕ ದಳದ ಸಿಬ್ಬಂದಿ, ಸಶಸ್ತ್ರ ಪಡೆಗಳಾದ ಬಿಎಸ್‌ಎಫ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !