ಕಾರ್ಯಪ್ಪ ಶಿಸ್ತು, ಪ್ರಾಮಾಣಿಕತೆ ಸ್ಮರಣೆ

ಮಡಿಕೇರಿ: ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರನ್ನು ಕೊಡಗಿನಲ್ಲಿ ಶನಿವಾರ ಸ್ಮರಿಸಲಾಯಿತು.
ಅವರ 124ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆ ಮುಂದೆ ಆಯೋಜಿಸಿತ್ತು.
ಇಲ್ಲಿಗೆ ಬಂದ ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ (ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ‘ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೈಗೂಡಿಸಿಕೊಂಡಿದ್ದರು. ಅವರ ಆದರ್ಶ ಬದುಕು ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಕರೆ ನೀಡಿದರು.
‘ಯುವ ಜನರು ದೇಶವನ್ನು ಪ್ರೀತಿಸಬೇಕು. ರಾಷ್ಟ್ರ ಮೊದಲು, ನಂತರ ಉಳಿದವು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಈ ಬಗ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸದಾ ಹೇಳುತ್ತಿದ್ದರು. ಭಾರತ ಸೇನೆಯ ಹೆಮ್ಮೆಯ ಪುತ್ರ. ಭಾರತೀಯ ಸೇನೆಗೆ ತನ್ನದೇ ಆದ ಇತಿಹಾಸ ನಿರ್ಮಿಸಿದ ಕೀರ್ತಿ ರಾಷ್ಟ್ರದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಸಲ್ಲುತ್ತದೆ’ ಎಂದರು.
ಜಿಲ್ಲಾ ಪೊಲೀಸ್ ವಾದ್ಯ ತಂಡ ಸಿದ್ದೇಶ್ ಅವರ ನೇತೃತ್ವದಲ್ಲಿ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕೂಡಿಗೆ ಸೈನಿಕ ಶಾಲೆ, ಮಡಿಕೇರಿಯ ಸಂತ ಮೈಕೆಲರ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ, ಬ್ಲಾಸಂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಶಸ್ತಿ ಪತ್ರ ವಿತರಣೆ
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಮೈಕೆಲರ ಶಾಲೆಯ ಎನ್.ಭೂಮಿಕಾ, ದ್ವಿತೀಯ ಸ್ಥಾನ ಪಡೆದ ಕೊಡಗು ವಿದ್ಯಾಲಯದ ಕೀರ್ತಿ ಅಯ್ಯಪ್ಪ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆನೆತ್ ರಾಯ್ ಅವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯಂ, ಮಡಿಕೇರಿ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಂಗಧಾಮಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿದೇಶಕರಾದ ಪುಟ್ಟರಾಜು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಪ್ರಮೋದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಗೌರವ ನಮನ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.