ಗುರುವಾರ , ಆಗಸ್ಟ್ 5, 2021
25 °C
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಲಾ ₹ 3 ಸಾವಿರ ಮೊತ್ತದ ಚೆಕ್‌ ವಿತರಣೆ

ಮಡಿಕೇರಿ | ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಯೋಜನೆ ಪ್ರಕಟಿಸಲು ಚಿಂತನೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ಇಲ್ಲಿ ಭರವಸೆ ನೀಡಿದರು.

ನಗರದ ಜಿ.ಪಂ ಭವನದಲ್ಲಿ ಗುರುವಾರ ನಡೆದ ಕೊಡಗು ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ಮೂಲಕ ತಲಾ ₹ 3 ಸಾವಿರದ ಪ್ರೋತ್ಸಾಹ ಧನ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು.

‘ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ಮಾದರಿ ಸಾಲ ನೀಡುವ ಸಂಬಂಧ ಈಗಾಗಲೇ ಸರ್ಕಾರದ ಮಟ್ಟದಲ್ಲಿ 2-3 ಸುತ್ತಿನ ಸಭೆಗಳು ನಡೆದಿದ್ದು, ಶೀಘ್ರದಲ್ಲಿಯೇ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಹೇಳಿದರು.

ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಎರಡು ಮೂರು ಬಾರಿ ಸಭೆ ನಡೆದಿದೆ. ಸದ್ಯದಲ್ಲೇ ಅಂತಿಮ ತೀರ್ಮಾನ ಹೊರ ಬೀಳಲಿದೆ ಎಂದು ಸಚಿವರು ನುಡಿದರು.

ಬಡವರ ಬಂಧು ಯೋಜನೆ ಸೇರಿದಂತೆ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ಕಲ್ಪಿಸುವಲ್ಲಿ ಮುಂದಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದು, ಇದುವರೆಗೆ 21 ಸಾವಿರ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ಕಲ್ಪಿಸಲಾಗಿದೆ ಎಂದು ಹೇಳಿದರು.

ದೇಶ ವಿದೇಶದಿಂದ ಆಗಮಿಸುವವರಲ್ಲಿ ಮಾಹಿತಿ ನೀಡುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ತರವಾಗಿದೆ. ಕೋವಿಡ್ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸುತ್ತಿದ್ದು, ತಮ್ಮ ಆರೋಗ್ಯದ ಕಡೆಯು ಗಮನ ಹರಿಸುವಂತಾಗಬೇಕು ಎಂದು ಹೇಳಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಆಶಾ ಕಾರ್ಯಕರ್ತರು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿದ್ದು ಇವರ ಕಾರ್ಯ ಸ್ಮರಣೀಯ ಎಂದರು.

ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕೋವಿಡ್-19 ಹೋಗಲಾಡಿಸಲು ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕರ್ತರು ನಿಜವಾದ ಕೊರೊನಾ ಸೈನಿಕರು ಎಂದು ಕೆ.ಜಿ.ಬೋಪಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಕೋವಿಡ್ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಮಾತನಾಡಿ, ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಲ ಕಾಲಕ್ಕೆ ಹೊರಡಿಸುವ ಆದೇಶವನ್ನು ಚಾಚು ತಪ್ಪದೇ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ, ಕೊಡಗು ಡಿಸಿಸಿ ಬ್ಯಾಂಕ್ ಸಿ.ಎಂ. ಪರಿಹಾರ ನಿಧಿಗೆ ₹ 10 ಲಕ್ಷ ನೀಡಿದೆ. ₹ 8 ಲಕ್ಷ ವೆಚ್ಚದಲ್ಲಿ 2 ವೆಂಟಿಲೇಟರ್ ಖರೀದಿಸಿ ನೀಡಲಾಗುತ್ತದೆ. ವಿವಿಧ ಸಹಕಾರ ಸಂಘಗಗಳ ಮೂಲಕ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ₹ 33 ಲಕ್ಷ ಸಂಗ್ರಹಿಸಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಮೈಸೂರು ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಕಾಶ್ ರಾವ್, ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ.ಸಲೀಂ, ಯೋಗೇಂದ್ರ ನಾಯಕ್ ಹಾಜರಿದ್ದರು. 

‘ಮರು ಪಾವತಿ ಅವಧಿ ವಿಸ್ತರಣೆ ಶೀಘ್ರ ಪ್ರಕಟ’ 
ಮಡಿಕೇರಿ:
ರಾಜ್ಯದಲ್ಲಿ ₹ 14,500 ಕೋಟಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಮುಂದಿನ ಸಾಲಿನಲ್ಲಿ ರೈತರಿಗೆ ₹ 20 ಸಾವಿರ ಕೋಟಿ ಸಾಲ ನೀಡುವ ಗುರಿಯಿದ್ದು ಹೆಚ್ಚಿನ ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಜೂನ್ 30ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರು ಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಜೊತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

‌ಕಳೆದ ವರ್ಷ ರೈತರಿಗೆ ₹ 13,500 ಕೋಟಿ ಸಾಲ ಕೊಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ನಬಾರ್ಡ್‌ನಿಂದ ಹೆಚ್ಚುವರಿ ಒಂದು ಸಾವಿರ ಕೋಟಿ ರೂಪಾಯಿ ಲಭಿಸಿರುವುದರಿಂದ ಈ ಬಾರಿ ₹ 14,500 ಕೋಟಿ ರೂಪಾಯಿ ಸಾಲ ನೀಡಲು ಚಾಲನೆ ಕೊಟ್ಟಿದ್ದೇವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು