ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣ ಲಿಂಗ ಪತ್ತೆ: ಕಠಿಣ ಕ್ರಮಕ್ಕೆ ಒತ್ತಾಯ

ಮಡಿಕೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆ; ಹಲವು ವಿಷಯ ಚರ್ಚೆಗೆ
Published 2 ಜೂನ್ 2024, 6:11 IST
Last Updated 2 ಜೂನ್ 2024, 6:11 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ಕುರಿತು ಹೆಚ್ಚಿನ ನಿಗಾ ವಹಿಸುವಂತೆ ಇಲ್ಲಿ ಶನಿವಾರ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆ ಸೂಚಿಸಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಗರ್ಭಧಾರಣಾ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆ ನಿಷೇಧ) ಅಧಿನಿಯಮ 1994, ನಿಯಮ 1996 (ಪಿಸಿ ಮತ್ತು ಪಿಎನ್‍ಡಿಟಿ) ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಹಲವು ವಿಷಯಗಳು ಚರ್ಚೆಗೆ ಬಂದವು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರೇಡಿಯೋಲಾಜಿಸ್ಟ್ ಡಾ.ಎಂ.ಆನಂದ್, ಮಕ್ಕಳ ತಜ್ಞರಾದ ಡಾ.ಕುಶ್ವಂತ್ ಕೋಳಿಬೈಲು, ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಗೌರಮ್ಮ ಮಾದಮ್ಮಯ್ಯ, ಒಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್, ಇತರರು ಪಾಲ್ಗೊಂಡು ಜಿಲ್ಲೆಯಲ್ಲಿನ ಹಲವು ಸ್ಕ್ಯಾನಿಂಗ್ ಕೇಂದ್ರಗಳ ಕಾರ್ಯ ಚಟುವಟಿಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ‘ಈಗಾಗಲೆ ಜಿಲ್ಲೆಯಲ್ಲಿ ಒಂದು ಸ್ಕ್ಯಾನಿಂಗ್ ಸೆಂಟರ್‌ನ ಸ್ಕ್ಯಾನಿಂಗ್ ಕೊಠಡಿಯೊಂದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಕಾನೂನಿನಂತೆ ನಿಯಮಾನುಸಾರ ಕ್ರಮವಹಿಸಲಾಗುವುದು’ ಎಂದು ಸಭೆಯ ಗಮನಕ್ಕೆ ತಂದರು.

ಇನ್ನೂ ಕೆಲವು ಸ್ಕ್ಯಾನಿಂಗ್ ವಿರುದ್ಧ ದೂರುಗಳು ಕೇಳಿ ಬಂದಿವೆ. ಭೇಟಿ ನೀಡಿದ ಸಂದರ್ಭದಲ್ಲಿ ಹಲವು ನ್ಯೂನತೆಗಳೂ ಗೋಚರಿಸಿವೆ. ಇವುಗಳನ್ನು ಸರಿಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಕೆಲವಾರು ಸ್ಕ್ಯಾನಿಂಗ್ ಕೇಂದ್ರಗಳು ಸರಿಪಡಿಸಿಕೊಂಡಿದ್ದರೆ, ಮತ್ತೆ ಹಲವು ಕೇಂದ್ರಗಳು ಸರಿಪಡಿಸಿಕೊಂಡಿಲ್ಲ ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಮಿತಿ ಸದಸ್ಯರು ನಿಯಮಾನುಸಾರ ಕಾನೂನಿನ ರೀತಿ ಕ್ರಮವಹಿಸುವಂತೆ ಸಲಹೆ ನೀಡಿದರು. ಈ ವೇಳೆ ಮಾತನಾಡಿದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಗೌರಮ್ಮ ಮಾದಮ್ಮಯ್ಯ, ‘ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದೇ ಅಪರಾಧವಾಗಿದೆ. ಈ ಬಗ್ಗೆ ನಿಯಮಾನುಸಾರ ಕ್ರಮವಹಿಸುವುದು ಅತ್ಯಗತ್ಯ’ ಎಂದರು.

ಗಂಡು ಮತ್ತು ಹೆಣ್ಣು ಸಮಾನಾಗಿದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ರೀತಿ ಲಿಂಗಪತ್ತೆ ಮಾಡಿಕೊಂಡು ಹೋದರೆ ಸಮಾಜ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದನ್ನು ತಿಳಿಸುತ್ತದೆ ಎಂದರು.

ಸಮಿತಿ ಸದಸ್ಯರು ಹಾಗೂ ಮಕ್ಕಳ ತಜ್ಞರಾದ ಕುಶ್ವಂತ್ ಕೋಲಿಬೈಲು, ಓಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್ ಇತರರು ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT