ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಗಾಂಧಿ ಭವನ, ಗ್ರೇಟರ್ ರಾಜಸೀಟು ಉದ್ಯಾನ ಉದ್ಘಾಟನೆ

Last Updated 19 ಮಾರ್ಚ್ 2023, 7:32 IST
ಅಕ್ಷರ ಗಾತ್ರ

ಮಡಿಕೇರಿ: ‘ಫಲಾನುಭವಿಗಳ ಸಮ್ಮೇಳನ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು.

ಗಾಂಧಿ ಭವನ, ಗ್ರೇಟರ್ ರಾಜಸೀಟು, ವೈದ್ಯಕೀಯ ಕಾಲೇಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಾರ್ಡ್ ವಿಭಾಗ ಕಟ್ಟಡ, ಅಗ್ನಿಶಾಮಕ ಠಾಣೆ, ಪಶು ಆಸ್ಪತ್ರೆ, ಅಂಗನವಾಡಿ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಅಂಬೇಡ್ಕರ್ ಭವನ, ಕುಶಾಲನಗರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದರು.

ಸಮಗ್ರ ಗಿರಿಜನ ಯೋಜನಾ ಇಲಾಖೆಯ ನೂತನ ಕಟ್ಟಡ, ವಾಲ್ಮೀಕಿ ಆಶ್ರಮ ಶಾಲೆ, ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಮ್ಮತ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ‘ಕ್ರಿಟಿಕಲ್ ಕೇರ್ ಸೆಂಟರ್’ ಆಸ್ಪತ್ರೆ ನಿರ್ಮಿಸುವ ಕಾಮಗಾರಿಗೆ ಚಾಲನೆ, ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ, ಹೀಗೆ ಅಂದಾಜು ₹539.86 ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಅವರು ಸರ್ಕಾರ ಕೊಡಗು ಜಿಲ್ಲೆಗೆ ಕೊಟ್ಟಿರುವ ಹಲವು ಕೊಡುಗೆಗಳನ್ನು ಕುರಿತು ವಿವರಿಸಿದರು.

‘ರಾಜ್ಯ ಸರ್ಕಾರವು ಕಳೆದ ಮೂರೂವರೆ ವರ್ಷಗಳಿಂದ ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹100 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು, ಅದರಲ್ಲಿ ಮಹಿಳಾ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ಈಗ ಉದ್ಘಾಟಿಸಲಾಗಿದೆ’ ಎಂದರು.

‘ರೈತ ವಿದ್ಯಾನಿಧಿ ಯೋಜನೆ, ನೇಕಾರರು ಮತ್ತು ಮೀನುಗಾರರ ಸಾಲಮನ್ನಾ, ಅಮೃತ ಗ್ರಾಮ ಪಂಚಾಯಿತಿ ಯೋಜನೆ, ಕುಟೀರ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಗ್ರಾಮ ಒನ್ ಕೇಂದ್ರಗಳ ಸ್ಥಾಪನೆ, ಜನಸೇವಕ ಯೋಜನೆ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹೀಗೆ ಹಲವು ಜನಪರ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಹೇಳಿದರು.

‘ಕೊಡಗು ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳೆಂದು ಗುರುತಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲು, ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಜಾರಿಗೊಳಿಸಲಾಗಿದೆ. ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ತಲಾ ₹30 ಲಕ್ಷದಂತೆ ಮೂರು ವರ್ಷದ ಅವಧಿಯಲ್ಲಿ ಅನುದಾನ ನೀಡಲಾಗುತ್ತದೆ’ ಎಂದರು.

‘ಸರ್ಕಾರ ಕುಶಾಲನಗರದ ಚಿಕ್ಕ ಅಳುವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಅನುಮೋದನೆ ನೀಡಿದೆ. ₹1.98 ಕೋಟಿ ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ’ ಎಂದು ಹೇಳಿದರು.

‘ಅಮೃತ ಶಾಲಾ ಸೌಲಭ್ಯ ಯೋಜನೆಯಡಿ 16 ಶಾಲೆಗಳ ದುರಸ್ತಿ ಮತ್ತು ನವೀಕರಣಕ್ಕೆ ₹1.60 ಕೋಟಿ ಅನುದಾನ ನೀಡಲಾಗಿದೆ. ಒಟ್ಟು 104 ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ರಚಿಸಲಾಗಿದ್ದು, 439 ವಾರ್ಡ್ ಮಟ್ಟದ ಒಕ್ಕೂಟಗಳು ಮತ್ತು 2,971 ಸ್ವಸಹಾಯ ಗುಂಪುಗಳನ್ನು ಒಳಗೊಂಡಿದೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆ ಅಭಿಯಾನದಡಿ ಕೊಡಗು ಜಿಲ್ಲೆಯಲ್ಲಿ ಒಟ್ಟು 73 ಸರ್ಕಾರಿ ಶಾಲೆಗಳ ಹೆಸರಿಗೆ ಹಾಗೂ ಒಟ್ಟು 156 ಅಂಗನವಾಡಿ ಕೇಂದ್ರಗಳ ಹೆಸರಿಗೆ ಖಾತೆ ಬದಲಾವಣೆ ಮಾಡಲಾಗಿದೆ. 2022–23ನೇ ಸಾಲಿನಲ್ಲಿ ಮಳೆಯಿಂದಾಗಿ ಹಾನಿಯಾದ ಅಂಗನವಾಡಿ ಕಟ್ಟಡ ದುರಸ್ತಿಗೆ ತಲಾ ₹2 ಲಕ್ಷದಂತೆ 38 ಅಂಗನವಾಡಿ ಕೇಂದ್ರಗಳಿಗೆ ₹95 ಲಕ್ಷ ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT