ಸೋಮವಾರ, ಜನವರಿ 25, 2021
27 °C
ಡಿ.22ರಂದು ಮಡಿಕೇರಿ, ಸೋಮವಾರಪೇಟೆ, ಡಿ.27ರಂದು ವಿರಾಜಪೇಟೆಯಲ್ಲಿ ಮತದಾನ

101 ಗ್ರಾ.ಪಂಗೆ ಎರಡು ಹಂತದಲ್ಲಿ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾ.ಪಂ.ಗಳಿಗೆ ಮತ್ತು 2ನೇ ಹಂತದಲ್ಲಿ ವಿರಾಜಪೇಟೆ ತಾಲ್ಲೂಕಿನ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ.

ಜಿಲ್ಲೆಯಲ್ಲಿ 104 ಗ್ರಾ.ಪಂ.ಗಳಿದ್ದು, ಇವುಗಳಲ್ಲಿ 101 ಗ್ರಾ.ಪಂ.ಗಳಿಗೆ ಚುನಾವಣೆ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ, ಗೋಣಿಕೊಪ್ಪಲು ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂಗಳ ಪದಾವಧಿ 2020-21ನೇ ಸಾಲಿನಲ್ಲಿ ಮುಕ್ತಾಯಗೊಳ್ಳಲಿದೆ. ಆದ್ದರಿಂದ, ಪ್ರಸ್ತುತ ಈ ಗ್ರಾ.ಪಂ.ಯಲ್ಲಿ ಚುನಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚುನಾವಣಾ ಮಾದರಿ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾ.ಪಂ ವ್ಯಾಪ್ತಿಯಲ್ಲಿ ನ.30ರಿಂದ ಡಿ.31ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಗ್ರಾ.ಪಂ ಚುನಾವಣೆ ಹಿನ್ನೆಲೆ ಜಿಲ್ಲೆಯ ಮೂರು ತಾಲ್ಲೂಕಿನಿಂದ ಮತಗಟ್ಟೆಗಳು ಹಾಗೂ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 562 ಮತಗಟ್ಟೆಗಳನ್ನು ಗುರುತಿಸಲಾಗಿದೆ. 472 ಮೂಲ ಮತಗಟ್ಟೆಗಳು, 90 ಹೆಚ್ಚುವರಿ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 443 ಒಟ್ಟು ಚುನಾವಣಾ ಕ್ಷೇತ್ರಗಳಿದ್ದು, ಇದರಲ್ಲಿ 1,202 ಸದಸ್ಯರಿಗೆ ಚುನಾವಣೆ ನಡೆಯಲಿದೆ. ಮಡಿಕೇರಿ ತಾಲ್ಲೂಕಿನಲ್ಲಿ 295, ವಿರಾಜಪೇಟೆ ತಾಲ್ಲೂಕಿನಲ್ಲಿ 424, ಸೋಮವಾರಪೇಟೆ ತಾಲ್ಲೂಕಿನಲ್ಲಿ 483 ಸದಸ್ಯರಿಗೆ ಚುನಾವಣೆ ನಡೆಯಲಿದೆ. ಗ್ರಾ.ಪಂ ಚುನಾವಣೆ ಹಿನ್ನೆಲೆ 110 ಚುನಾವಣಾ ಅಧಿಕಾರಿಗಳು ಮತ್ತು 110 ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ತಾಲ್ಲೂಕುವಾರು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಶೇ 10ರಷ್ಟು ಕಾಯ್ದಿರಿಸಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ 472 ಮತಗಟ್ಟೆಗಳು ಹಾಗೂ 90 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 562 ಮತಗಟ್ಟೆಗಳಿಗೆ ತಲಾ 619 ಪಿಆರ್‌ಒ ಮತ್ತು ಎಪಿಆರ್‍ಒಗಳು ಹಾಗೂ 1238 ಪೊಲಿಂಗ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 472 ಮೂಲ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಟ್ಟು 90 ಹೆಚ್ಚುವರಿ ಮತಗಟ್ಟೆಗಳಿವೆ. ಪ್ರತಿಯೊಂದು ಮತಗಟ್ಟೆಗೂ ಒಬ್ಬ ಅಧ್ಯಕ್ಷಾಧಿಕಾರಿ ಮತ್ತು ಮೂರು ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗುತ್ತದೆ. ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ವಿವರವನ್ನು ವೆಬ್‍ಸೈಟ್: www.kodagu.nic.in ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್, ಡಿವೈಎಸ್‍ಪಿ ದಿನೇಶ್ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು