ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಕ್ತಿ’ ವೈಫಲ್ಯ, ರೇವಣ್ಣ ಹಸ್ತಕ್ಷೇಪಕ್ಕೆ ‘ಕೈ’ ಕಿಡಿ

ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಬಿಸಿಬಿಸಿ ಚರ್ಚೆ
Last Updated 5 ಡಿಸೆಂಬರ್ 2018, 17:27 IST
ಅಕ್ಷರ ಗಾತ್ರ

ಬೆಂಗಳೂರು: ಸಂಪುಟ ವಿಸ್ತರಣೆ ಗೊಂದಲ, ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ, ಪಕ್ಷದ ಸದಸ್ಯತ್ವ ನೋಂದಣಿಯ ‘ಶಕ್ತಿ’ ಯೋಜನೆ ವೈಫಲ್ಯ, ಸಂಘಟನಾತ್ಮಕ ಚಟುವಟಿಕೆಯಲ್ಲಿ ನಾಯಕರ ನಿರಾಸಕ್ತಿ ಮತ್ತಿತರ ವಿಷಯಗಳ ಕುರಿತು ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆಗೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಾಯಕರ ಸಭೆ ನಡೆಯಿತು.

‘ರಾಜ್ಯದಲ್ಲಿ ಶಕ್ತಿ ಯೋಜನೆ ಸಂಪೂರ್ಣ ವಿಫಲವಾಗಿದೆ. ಅದರಲ್ಲೂ ಸಚಿವರು ಪ್ರತಿನಿಧಿಸುವ ಕ್ಷೇತ್ರಗಳಲ್ಲೇ ನೋಂದಣಿ ಆಗಿಲ್ಲ’ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮನ್ವಯ ಸಮಿತಿ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಲೋಕೋಪಯೋಗಿ ಸಚಿವ ರೇವಣ್ಣ ಕಾಂಗ್ರೆಸ್‌ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಬಜೆಟ್ ಯೋಜನೆಗಳು ಕೇವಲ ಘೋಷಣೆಗಳಾಗಿಯೇ ಉಳಿದಿವೆ. ಜನರ ದೂರುಗಳ ಬಗ್ಗೆ ತುರ್ತಾಗಿ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದೂ ಚರ್ಚೆ ನಡೆಯಿತು.

ಸಂಪುಟ ವಿಸ್ತರಣೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೂ ಮೊದಲೋ, ನಂತರವೋ ಎಂಬ ಗೊಂದಲ ಬೇಡ. ಆದಷ್ಟು ಬೇಗ ಸಂಪುಟ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಜೊತೆಗೂ ಚರ್ಚೆ ಮಾಡಬೇಕು. ಅಸಮಾಧಾನಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಹಿರಿಯ ಮುಖಂಡರು ಸಲಹೆ ನೀಡಿದ್ದಾರೆ.

ಸ್ಥಳೀಯಮಟ್ಟದ ಸಮಿತಿಗಳಲ್ಲಿ ಮೈತ್ರಿ ‘ಸೂತ್ರ’ದ ಅನ್ವಯ ಪಕ್ಷಕ್ಕೆ ಸರಿಯಾದ ಪಾಲು ಸಿಗುತ್ತಿಲ್ಲ. ಜೆಡಿಎಸ್ ಮುಖಂಡರು, ಕಾರ್ಯಕರ್ತರ ಕೆಲಸಗಳು ಮಾತ್ರ ಆಗುತ್ತಿವೆ. ಆದರೆ, ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಬೆಲೆಯೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಕ್ಷದ ವೇದಿಕೆಯಲ್ಲಿ ಗಮನಕ್ಕೆ ತರಲಾಗಿದೆ. ಇದನ್ನು ಸರಿಪಡಿಸುವ ಬಗ್ಗೆ ಜೆಡಿಎಸ್ ಮುಖಂಡರಿಗೆ ತಿಳಿಸಬೇಕು ಎಂಬ ಒತ್ತಾಯವೂ ಕೇಳಿಬಂತು.

ಮಂಡ್ಯ ಜಿಲ್ಲೆಯ ವಸ್ತುಸ್ಥಿತಿಯನ್ನು ಚೆಲುವರಾಯಸ್ವಾಮಿ ಪ್ರಸ್ತಾಪಿಸಿದಾಗ, ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಸಿದ್ದರಾಮಯ್ಯ ಸಮಾಧಾನಪಡಿಸಿದರು.

ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಹಿರಿಯ ನಾಯಕರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಲೋಕಸಭೆ ಚುನಾವಣಾ ಸಿದ್ಧತೆಯ ಬಗ್ಗೆ ಚರ್ಚೆ ನಡೆಯಿತು. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಸಲಹೆ ವ್ಯಕ್ತವಾಗಿದೆ’ ಎಂದರು.

ಉಪಮುಖ್ಯಮಂತ್ರಿ‌ ಪರಮೇಶ್ವರ, ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್, ಕೆ.ಎಚ್.ಮುನಿಯಪ್ಪ, ರೆಹಮಾನ್ ಖಾನ್, ಎಂ.ಬಿ. ಪಾಟೀಲ, ಟಿ.ಬಿ.ಜಯಚಂದ್ರ, ಕಾಗೋಡು ತಿಮ್ಮಪ್ಪ, ಶಾಮನೂರು ಶಿವಶಂಕರಪ್ಪ, ಸಿ.ಎಂ. ಇಬ್ರಾಹಿಂ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT