ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

25ಕ್ಕೆ ನೆರೆ ಸಂತ್ರಸ್ತರಿಗೆ ಮನೆ ಹಸ್ತಾಂತರ
Last Updated 19 ಅಕ್ಟೋಬರ್ 2019, 12:41 IST
ಅಕ್ಷರ ಗಾತ್ರ

ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೇ 25ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು 2018ರ ನೆರೆ ಸಂತ್ರಸ್ತರಿಗೆ ಕರ್ಣಂಗೇರಿಯಲ್ಲಿ ನಿರ್ಮಿಸಿರುವ 35 ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು.

ಅದೇ ಮುಖ್ಯಮಂತ್ರಿ ಜಿಲ್ಲಾ ಪಂಚಾಯಿತಿ ನೂತನ ಕಟ್ಟಡವನ್ನೂ ಉದ್ಘಾಟನೆ ಮಾಡಲಿದ್ದಾರೆ. ಕರ್ಣಂಗೇರಿಯಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿರ್ಮಿಸಲಾಗಿರುವ ಮನೆಗಳ ಹಸ್ತಾಂತರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಅಂದು ಬೆಳಿಗ್ಗೆ 10.45ಕ್ಕೆ ಮಡಿಕೇರಿಗೆ ಸಿ.ಎಂ ಆಗಮಿಸಲಿದ್ದು, ಕರ್ಣಂಗೇರಿಯಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ. ನಂತರ, ಜಿಲ್ಲಾ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟನೆ ನಡೆಸಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕ್ರೀಡಾ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೇದಿಕೆ ಕಾರ್ಯಕ್ರಮ, ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ, ಸಿಬ್ಬಂದಿ ನಿಯೋಜನೆ, ಆಂಬುಲೆನ್ಸ್, ವೈದ್ಯಕೀಯ ತಂಡ ಹೀಗೆ ಹಲವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಮಾತನಾಡಿ, ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಅಗತ್ಯ ಬಂದೋಬಸ್ತ್ ಕೈಗೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಜಿ.ಪಂ ನೂತನ ಕಟ್ಟಡ ಸಂಪೂರ್ಣ ಕಾಮಗಾರಿ ಮುಗಿದಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

ಮಡಿಕೇರಿ ಡಿಎಫ್‌ಒ ಪ್ರಭಾಕರನ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿ.ಪಂ ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶ್ರೀನಿವಾಸ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಇಇ ಪ್ರಭು, ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಐಟಿಡಿಪಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ನಗರಸಭೆ ಆಯುಕ್ತರಾದ ರಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ರೇವಣ್ಣ, ಪ್ರವಾಸೋದ್ಯಮ ಅಧಿಕಾರಿ ರಾಘವೇಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT