ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾವಣಿ, ದೀಪ, ಎಲ್‌ಇಡಿ ಫಲಕ ಅಳವಡಿಸಿ: ರಾಜಾಸೀಟ್‌ ಅಭಿವೃದ್ದಿಗೆ ಹಲವು ಸಲಹೆಗಳು

Published 1 ಜುಲೈ 2024, 6:01 IST
Last Updated 1 ಜುಲೈ 2024, 6:01 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಾಸೀಟ್ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಹಲವು ಸಲಹೆಗಳು ವ್ಯಕ್ತವಾದವು. ಜೊತೆಗೆ, ‘ಕೂರ್ಗ್ ವಿಲೇಜ್’ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಸುದೀರ್ಘ ಚರ್ಚೆಗಳು ನಡೆದವು.

ರಾಜಾಸೀಟು ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಚಾವಣಿ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ರಾಜಾಸೀಟನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟು ಅಭಿವೃದ್ಧಿ ಸಂಬಂಧ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಲೋಕೋಪಯೋಗಿ ಇಲಾಖೆ ಅವರು ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.

ನಗರಸಭೆಯವರು ಉದ್ಯಾನಕ್ಕೆ ನೀರಿನ ಸಂಪರ್ಕ ನೀಡಬೇಕು ಎಂದೂ ಅವರು ನಿರ್ದೇಶನ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೀಶ್ ಮಾತನಾಡಿ, ‘ರಾಜಾಸೀಟ್ ಉದ್ಯಾನ, ಕೂರ್ಗ್ ವಿಲೇಜ್ ಅಭಿವೃದ್ಧಿ ಜೊತೆಗೆ ಗದ್ದುಗೆ ಉದ್ಯಾನ ಹಾಗೂ ನೆಹರು ಮಂಟಪ ಅಭಿವೃದ್ಧಿಗೂ ಅಗತ್ಯ ಕ್ರಮ ವಹಿಸಲಾಗಿದೆ’ ಎಂದರು.

ಪ್ರಸಕ್ತ ಸಾಲಿನಲ್ಲಿ ರಾಜಾಸೀಟ್ ಉದ್ಯಾನ ನಿರ್ವಹಣೆ ಹಾಗೂ ಅಭಿವೃದ್ಧಿ ಸಂಬಂಧ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ಪಡೆದರು.

ಈ ವೇಳೆ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್, ‘ರಾಜಾಸೀಟಿನಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಎಲ್‍ಇಡಿ ಫಲಕ ಮೂಲಕ ಮಾಹಿತಿ ನೀಡಬೇಕು’ ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಸಹಾಯಕ ಎಂಜಿನಿಯರ್ ಸತೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಅವರು ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT