ಮಡಿಕೇರಿ: ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ₹ 5 ಕೋಟಿ ಬಿಡುಗಡೆಯಾಗಿದ್ದು, ನಿರ್ಮಾಣ ಕಾರ್ಯಕ್ಕಾಗಿ ಅಗತ್ಯವಿರುವ ಭೂಮಿಯನ್ನು ಕ್ರೀಡಾ ಇಲಾಖೆಗೆ ಒದಗಿಸಬೇಕಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.
ಪೊನ್ನಂಪೇಟೆಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದಿಂದ ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಬಜೆಟ್‍ನಲ್ಲಿ ₹ 5 ಕೋಟಿ ಪ್ರಕಟಿಸಲಾಗಿತ್ತು. ಅದರಂತೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಚಾಲನೆ ನೀಡಬೇಕಿದೆ. ಅದಕ್ಕಾಗಿ ಅಗತ್ಯವಿರುವ ಭೂಮಿಯನ್ನು ಸರ್ವೇ ಮಾಡಿ ನೀಲನಕ್ಷೆ ತಯಾರಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ ಮಾತನಾಡಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ಪೊನ್ನಂಪೇಟೆ ಪ್ರೌಢಶಾಲೆ ಇತ್ತು. ಪ್ರೌಢಶಾಲೆಗೆ ಒಂದು ಇತಿಹಾಸವಿದ್ದು, ಇದರ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು. ಜೊತೆಗೆ, ಇಲ್ಲಿನ ವಿದ್ಯಾರ್ಥಿಗಳಿಗೂ ಸಹ ಅನುಕೂಲ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಮೋಹನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್, ಮುಖಂಡರಾದ ಪಿ.ಕೆ.ಪೊನ್ನಪ್ಪ, ಪ್ರಮೋದ್ ಗಣಪತಿ, ಸಾಜಿ ಅಚ್ಚುತ್ತನ್ ಭಾಗವಹಿಸಿದ್ದರು.