ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ತ ಸ್ಥಳದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣ: ಶಾಸಕ ಡಾ.ಮಂತರ್‌ಗೌಡ ಭರವಸೆ

‘ಕನಕದಾಸರ ಜಯಂತ್ಯುತ್ಸವ’ದಲ್ಲಿ ಭರವಸೆ ನೀಡಿದ ಶಾಸಕ ಡಾ.ಮಂತರ್‌ಗೌಡ
Published 1 ಡಿಸೆಂಬರ್ 2023, 4:54 IST
Last Updated 1 ಡಿಸೆಂಬರ್ 2023, 4:54 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲೆಯ ಸೂಕ್ತ ಸ್ಥಳದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜದ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮುದಾಯ ಭವನ ನಿರ್ಮಾಣಕ್ಕಾಗಿ ಕೂಡಲೇ ಜಾಗ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಇಂದಿನ ಮೊಬೈಲ್ ತಂತ್ರಜ್ಞಾನ ಯುಗದಲ್ಲಿಯೂ ಸಮಾಜದಲ್ಲಿ ಹಲವು ತಾರತಮ್ಯಗಳನ್ನು ಕಾಣುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು ಅವರು, ಈ ತಾರತಮ್ಯಗಳನ್ನು ಹೋಗಲಾಡಿಸಲು ಬಸವಣ್ಣ, ಅಲ್ಲಮಪ್ರಭು ಸೇರಿದಂತೆ ಹಲವು ವಚನಕಾರರು, ಹಾಗೆಯೇ ದಾಸ ಶ್ರೇಷ್ಠ ಕನಕದಾಸರ ರಚನೆಗಳು ಸಹಕಾರಿಯಾಗಿವೆ ಎಂದರು.

ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಭಕ್ತ ಕನಕದಾಸರ ಕೊಡುಗೆ ನಿಜಕ್ಕೂ ಅಪಾರವಾಗಿದೆ. ಕನಕದಾಸರ ಚಿಂತನೆಗಳು ಸಾರ್ವಕಾಲಿಕವೂ ಆಗಿವೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಶರಣರು ಹಾಗೂ ದಾಸರ ಕೊಡುಗೆ ಅಪಾರ’ ಎಂದರು.

‘ಕನಕದಾಸರು ಶೋಷಿತ ಜನರ ಬಗ್ಗೆ ಕೀರ್ತನೆ ಮೂಲಕ ಬೆಳಕು ಚೆಲ್ಲಿದ್ದಾರೆ. ಭಕ್ತ ಕನಕದಾಸ ಚಲನಚಿತ್ರದ ಮೂಲಕ ಕನಕದಾಸರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬಹುದು’ ಎಂದು ಹೇಳಿದರು.

ಮೋಹನತರಂಗಿಣಿ, ನಳಚರಿತ್ರೆ, ಮೊದಲಾದ ಸಾಹಿತ್ಯ ಇಂದಿಗೂ ಪ್ರಸ್ತುತವಾಗಿದೆ. ಕನಕದಾಸರು ಸಮಾಜಕ್ಕೆ ತನ್ನದೇ ಆದ ಸಂದೇಶಗಳನ್ನು ನೀಡಿದ್ದಾರೆ. ಅವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.

ಹುಣಸೂರು ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಂ.ಆರ್.ರಾಶಿ ಮಾತನಾಡಿ, ‘ಕನಕ ಎಂದರೆ ಚಿನ್ನ, ಭಕ್ತ ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದರು.

ಸಮಾಜದಲ್ಲಿ ಮೌಡ್ಯವನ್ನು ಹೋಗಲಾಡಿಸಲು ಕನಕದಾಸರು ಪ್ರಯತ್ನಿಸಿದ್ದಾರೆ. ಕುಲಕುಲವೆಂದು ಹೊಡೆದಾಡದಿರಿ ಎಂಬ ಸಂದೇಶ ನೀಡಿದ್ದಾರೆ. ಕೀರ್ತನೆಗಳ ಮೂಲಕ ಬದುಕಿನ ಅಸಮತೋಲನ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದು ತಿಳಿಸಿದರು.

ಕನಕದಾಸರ ಕಾವ್ಯ ಕೃತಿಗಳಲ್ಲಿ ಒಂದಾದ ರಾಮಧ್ಯಾನ ಚರಿತೆಯು ಸಮಾಜದಲ್ಲಿನ ಅಂಕುಡೊಂಕುಗಳ ಬಗ್ಗೆ ಪ್ರಸ್ತುತಪಡಿಸಿದ್ದಾರೆ ಎಂದರು.

ಸಕಲಜೀವಿಗಳು ಸಹ ಬದುಕುವ ಹಕ್ಕು ಇದೆ ಎಂಬುದನ್ನು ಕನಕದಾಸರು ಪ್ರತಿಪಾದಿಸಿದ್ದಾರೆ. ವೈಜ್ಞಾನಿಕ ಚಿಂತನೆಯತ್ತ ಪ್ರತಿಯೊಬ್ಬರನ್ನೂ ಕೊಂಡೊಯ್ಯುತ್ತಾರೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ, ಉಪಾಧ್ಯಕ್ಷರಾದ ಟಿ.ಕೆ.ವಸಂತ, ಖಜಾಂಜಿ ಶಿವಣ್ಣ, ಮುಖಂಡರಾದ ಭರಮಣ್ಣ, ರವಿಗೌಡ, ಎಂ.ಟಿ.ಗಣೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಕೃಷ್ಣಪ್ಪ, ಭಾಗಮಂಡಲ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇದ್ದರು.

ಜ.3ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ:

ಕುರುಬ ಸಮಾಜದ ಮುಖಂಡರಾದ ನಂಜುಂಡಸ್ವಾಮಿ ಮಾತನಾಡಿ ‘ಜ.3 ರಂದು ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸಲಿದ್ದು ಕುಶಾಲನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು. ಭಕ್ತ ಕನಕದಾಸರು ‘ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ’ ಎಂಬ ಕೀರ್ತನೆಯನ್ನು ಹಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT