ಶುಕ್ರವಾರ, ಸೆಪ್ಟೆಂಬರ್ 17, 2021
30 °C
‘ಕಾನೂನು ಬದ್ಧವಾಗಿ ನಡೆಯಲಿ’

ಪ್ರವಾಸೋದ್ಯಮ: ಸಂಘರ್ಷ ಬೇಡ–ರಾಜೀವ್ ಬೋಪಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾದ ವಾತಾವರಣ ಈಗಾಗಲೇ ಸೃಷ್ಟಿಯಾಗಿರುವುದರಿಂದ ಯಾರೂ ಸಂಘರ್ಷಕ್ಕೆ ಅವಕಾಶ ನೀಡಬಾರದು. ಪ್ರವಾಸೋದ್ಯಮ ಕಾನೂನು ಬದ್ಧವಾಗಿ ಮುಂದುವರಿಯಬೇಕು ಮತ್ತು ಪರಿಸರ ಸ್ನೇಹಿಯಾಗಿರಬೇಕು ಎಂದು ಕೊಡಗು ಹಿತರಕ್ಷಣಾ ಬಳಗದ ಅಧ್ಯಕ್ಷ ರಾಜೀವ್ ಬೋಪಯ್ಯ ತಿಳಿಸಿದ್ದಾರೆ.

‘ಪೊನ್ನಂಪೇಟೆಯಲ್ಲಿ ನಡೆದ ಸಭೆಯೊಂದರಲ್ಲಿ ತಾವು ಪ್ರವಾಸೋದ್ಯಮದ ವಿರುದ್ಧವಾಗಿ ಹೇಳಿಕೆ ನೀಡಿಲ್ಲ, ಬದಲಿಗೆ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿರುವವರು ಮತ್ತು ವಿರೋಧಿಸುವವರು ಜಂಟಿಯಾಗಿ ಸಭೆ ನಡೆಸಿ ಕೊಡಗಿನ ಸಂಸ್ಕೃತಿ ಹಾಗೂ ಪರಿಸರಕ್ಕೆ ಧಕ್ಕೆಯಾಗದ ರೀತಿ ರೂಪುರೇಷಗಳನ್ನು ಸಿದ್ಧಪಡಿಸಲು ಸಲಹೆಗಳನ್ನು ನೀಡಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಧಾರ್ಮಿಕ ಕೇಂದ್ರಗಳನ್ನು ಪ್ರವಾಸಿತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ದೇವಾಲಯಗಳಿಗೆ ಬರುವ ಪ್ರವಾಸಿಗರು ವಸ್ತ್ರ ಸಂಹಿತೆಯನ್ನು ಪಾಲನೆ ಮಾಡದೆ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಜಿಲ್ಲೆಯ ವಿವಿಧೆಡೆ ಕಾನೂನಿಗೆ ವಿರುದ್ಧವಾದ ಪ್ರವಾಸಿ ಚಟುವಟಿಕೆಗಳು ನಡೆಯುತ್ತಿದೆ. ಬೆಟ್ಟ–ಗುಡ್ಡಗಳಿಂದ ಕೂಡಿದ ಪಶ್ಚಿಮಘಟ್ಟ ವ್ಯಾಪ್ತಿಯ ಕೊಡಗಿನ ಭೌಗೋಳಿಕ ಶಕ್ತಿಗೆ ಮೀರಿ ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಇದರಿಂದ ಪ್ರಾಕೃತಿಕ ಅಸಮತೋಲನ ಉಂಟಾಗಿ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ರೀತಿಯ ಚಟುವಟಿಕೆಗಳನ್ನು ನಿಯಂತ್ರಿಸಿ ಧಾರ್ಮಿಕ ಭಾವನೆಗಳನ್ನು ಗೌರವಿಸುವ ಮೂಲಕ ಪರಿಸರವನ್ನು ಉಳಿಸಿ ಬೆಳೆಸುವ ಪ್ರವಾಸೋದ್ಯಮ ಬೆಳವಣಿಗೆ ಕಾಣಬೇಕು ಎಂದು ರಾಜೀವ್ ಬೋಪಯ್ಯ ಸಲಹೆ ನೀಡಿದ್ದಾರೆ.

ಪ್ರವಾಸೋದ್ಯಮದ ಪರ, ವಿರೋಧ ಎನ್ನುವ ಸಂಘರ್ಷಮಯ ವಾತಾವರಣ ಸೃಷ್ಟಿಯಾಗಬಾರದು. ಬದಲಿಗೆ ಉಭಯ ಕಡೆಯವರು ಜಂಟಿಯಾಗಿ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ. ಕೊಡಗಿನ ಸಂಸ್ಕೃತಿ ಮತ್ತು ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಎರಡೂ ಕಡೆಯವರು ಸಮಾಲೋಚನೆ ನಡೆಸಬೇಕೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು