ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಹೊಸ ಆಯಾಮದ ಸಂಕಲ್ಪ: ಕೋಟ ಶ್ರೀನಿವಾಸ್ ಪೂಜಾರಿ

ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
Last Updated 15 ಆಗಸ್ಟ್ 2021, 13:33 IST
ಅಕ್ಷರ ಗಾತ್ರ

ಮಡಿಕೇರಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡಲು ದೃಢ ಸಂಕಲ್ಪ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಇಲ್ಲಿ ಹೇಳಿದರು.

ನಗರದ ಕೋಟೆ ಆವರಣದಲ್ಲಿ ಭಾನುವಾರ ಜಿಲ್ಲಾಡಳಿತ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸದಾಗಿ ಶಿಷ್ಯವೇತನ ನೀಡಲು ಒಂದು ಸಾವಿರ ಕೋಟಿ ರೂಪಾಯಿ ಹಣ ಮೀಸಲಿಡಲು ಸರ್ಕಾರ ನಿರ್ಧರಿಸಿದೆ. ಸಂಧ್ಯಾ ಸುರಕ್ಷಾ ಯೋಜನೆ ಅಡಿ ನೀಡುತ್ತಿದ್ದ ಮಾಸಾಶನವನ್ನು ₹ 1,000ದಿಂದ ₹1,200ಕ್ಕೆ ಹೆಚ್ಚಿಸಲಾಗಿದೆ. ವಿಧವಾ ವೇತನದ ಅಡಿ ನೀಡಲಾಗುತ್ತಿದ್ದ ಮಾಸಾಶನ ₹ 600ರಿಂದ ₹800ಕ್ಕೆ ಹೆಚ್ಚಿಸಿರುವುದರಿಂದ ಸುಮಾರು 17.25 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ದೊರೆಯಲಿದೆ. ವಿಕಲಚೇತನ ಯೋಜನೆ ಅಡಿ ಶೇ 40ರಿಂದ 75ರಷ್ಟು ವಿಕಲತೆ ಹೊಂದಿರುವವರಿಗೆ ನೀಡುತ್ತಿದ್ದ ಮಾಸಾಶನವನ್ನು ₹600ರಿಂದ ₹800ಕ್ಕೆ ಹೆಚ್ಚಿಸಿರುವುದರಿಂದ ಸುಮಾರು 3.66 ಲಕ್ಷ ಫಲಾನುಭವಿಗಳಿಗೆ ಈ ಪ್ರಯೋಜನ ದೊರೆಯಲಿದೆ’ ಎಂದು ಮಾಹಿತಿ ನೀಡಿದರು.

‘ಕೃಷಿ ಮತ್ತು ಎಪಿಎಂಸಿ ಕಾಯ್ದೆ ಜಾರಿಗೊಳಿಸುವುದರ ಮೂಲಕ ತಾನು ಬೆಳೆದ ಬೆಳೆಗೆ ತನ್ನದೇ ದರ ಎಂಬ ರೈತನ ಕನಸು ನನಸಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರತಿ ರೈತನು ಯಾವುದೇ ಅರ್ಜಿ ಸಲ್ಲಿಸದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವಿನಿಂದ ಪ್ರತಿವರ್ಷ ₹10 ಸಾವಿರ ಪಡೆಯುತ್ತಿರುವುದು ರೈತಾಪಿ ವರ್ಗದಲ್ಲಿ ಹೊಸ ಆಶಾಕಿರಣ ಸೃಷ್ಟಿಸಿದೆ. ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಯಾವುದೇ ಚಿಕಿತ್ಸೆಗೆ ₹5 ಲಕ್ಷ ಆರೋಗ್ಯ ವಿಮೆ ಜನಸಾಮಾನ್ಯರ ಬದುಕಿನಲ್ಲಿ ಹೊಸ ಭದ್ರತೆ ತಂದುಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡಿತ್ತು’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಸಂಭವಿಸಿದ್ಧ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿ, ಜಂಬೂರು, ಮದೆನಾಡು, ಬಿಳಿಗೇರಿ ಮತ್ತು ಗಾಳಿಬೀಡು ಗ್ರಾಮಗಳಲ್ಲಿ ಪ್ರತಿ ಮನೆಯನ್ನು ₹9.85 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿ ಈಗಾಗಲೇ ಸುಮಾರು 660 ಮನೆಗಳನ್ನು ಅರ್ಹ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಕುಟುಂಬದವರಿಗೆ ತೀವ್ರತೆಗೆ ಅನುಗುಣವಾಗಿ ₹5 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ತಡೆಗೋಡೆ ನಿರ್ಮಾಣಕ್ಕೆ ವಿಶೇಷ ಅನುದಾನ ₹100 ಕೋಟಿ ಘೋಷಣೆ ಮಾಡಲಾಗಿತ್ತು. ಅದರಲ್ಲಿ ₹65.15 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಕೋವಿಡ್ ರೋಗಿಗಳ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ 13 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಟ್ಯಾಂಕ್ ಸ್ಥಾಪಿಸಲಾಗಿದೆ. ಪ್ರಸ್ತುತ ಮತ್ತೊಂದು ಆಮ್ಲಜನಕ ಟ್ಯಾಂಕ್ ಸ್ಥಾಪಿಸಲಾಗುತ್ತಿದೆ. ಜೊತೆಗೆ ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಪಿಎಸ್‌ಎ ಆಮ್ಲಜನಕ ಪೂರೈಕೆ ಘಟಕ ಕಾರ್ಯಾರಂಭವಾಗಲಿದೆ. ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಒಟ್ಟು 8 ಕೋವಿಡ್ ಕೇರ್ ಸೆಂಟರ್‌ ಸ್ಥಾಪಿಸಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಾ ಮತ್ತು ಚಿಕಿತ್ಸಾ ಕ್ರಮಗಳನ್ನು ಪರಿಣಾಮಕಾರಿ ಆಗಿ ಕೈಗೊಳ್ಳಲಾಗಿದೆ. ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಅಸಂಘಟಿತ ವಲಯದ ಕಾರ್ಮಿಕರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಬಡಕುಟುಂಬಗಳಿಗೆ ಆಹಾರ ಪೂರೈಕೆ ಹಾಗೂ ಪರಿಹಾರ ಧನ ವಿತರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಅನ್ನು ಸಮರ್ಥವಾಗಿ ನಿಭಾಯಿಸಲಾಗಿದ್ದು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹಾಗೂ ಲಾಕ್‌ಡೌನ್ ಜಾರಿ, ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪನೆ, ಜಿಲ್ಲೆಯಲ್ಲಿದ್ದ ವಲಸೆ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಪೂರೈಕೆ ಹಾಗೂ ಕಾರ್ಮಿಕರಿಗೆ ಬಸ್ ವ್ಯವಸ್ಥೆಯೂ ಸೇರಿದಂತೆ ಜಿಲ್ಲೆಯ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಕೊರತೆ ಆಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT