ಕುಶಾಲನಗರ: ಇಲ್ಲಿನ ಪಟ್ಟಣ ಪಂಚಾಯಿತಿಯ 2ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಿಗದಿಯಾಗಿದ್ದ ಚುನಾವಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದ ಚುನಾವಣೆಯನ್ನು ಮುಂದೂಡಲಾಯಿತು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ಬೆಳಿಗ್ಗೆ ಆರಂಭಗೊಂಡಿತು. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಜಯಲಕ್ಷ್ಮಿ ಚಂದ್ರು, ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಲಕ್ಷ್ಮಿ ಹಾಗೂ ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ರೂಪಾ ಉಮಾಶಂಕರ್, ಉಪಾಧ್ಯಕ್ಷ ಸ್ಥಾನಕ್ಕೆ ಜೈವರ್ಧನ್ ನಾಮಪತ್ರ ಸಲ್ಲಿಸಿದರು.
ಇದರ ಬೆನ್ನಲ್ಲೇ ಚುನಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ್ ಹೈಕೋರ್ಟ್ ವಕೀಲ ಅಮೃತೇಶ್ ಅವರ ಮೂಲಕ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿ ಚುನಾವಣೆಗೆ ತಡೆಯಾಜ್ಞೆ ನೀಡಿತು.
ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕಿರಣ್ ಗೌರಯ್ಯ ಅವರು ಮಧ್ಯಾಹ್ನ 1 ಗಂಟೆಗೆ ಪಟ್ಟಣ ಪಂಚಾಯಿತಿ ಸದಸ್ಯರ ಸಭೆ ನಡೆಸಿ ಹೈಕೋರ್ಟ್‌ನಿಂದ ಚುನಾವಣೆ ನಡೆಸದಂತೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಘೋಷಣೆ ಮಾಡಿದರು.
ಬಿಜೆಪಿ ಸದಸ್ಯರು ಚುನಾವಣಾಧಿಕಾರಿ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದರು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ತಡೆಯಾಜ್ಞೆ ಪ್ರತಿ ನೀಡುವಂತೆ ಚುನಾವಣಾಧಿಕಾರಿಯನ್ನು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕಿರಣ್ ಗೌರಯ್ಯ ಅವರು ತಮ್ಮ ಅಧಿಕಾರ ಬಳಸಿ ಚುನಾವಣೆ ಮುಂದೂಡಲಾಗಿದೆ ಎಂಬ ಪತ್ರವನ್ನು ಕಾಂಗ್ರೆಸ್ ಸದಸ್ಯರಿಗೆ ನೀಡಿದರು.
ಈ ವೇಳೆ ಶಾಸಕ ಡಾ.ಮಂತರ್ ಗೌಡ, ತಾಲ್ಲೂಕು ಗ್ಯಾರಂಟಿ, ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖಂಡರಾದ ಕೆ.ಪಿ.ಚಂದ್ರಕಲಾ, ಮಂಜುನಾಥ್ ಗುಂಡೂರಾವ್ ಇದ್ದರು.
ಸಿಪಿಐ ಪ್ರಕಾಶ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.