ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಮಧ್ಯೆದ ಬಿರುಕು ಬಹಿರಂಗವಾಯಿತು.
‘ಚುನಾವಣಾ ಪ್ರಕ್ರಿಯೆ ಕಾನೂನುಬಾಹಿರವಾಗಿ ನಡೆಯುತ್ತಿದೆ’ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರ ನಡೆದರೆ, ಜೆಡಿಎಸ್‌ನ ಎಲ್ಲ ಸದಸ್ಯರು ಭಾಗಿಯಾದರು. ಅಂತಿಮವಾಗಿ ಕಾಂಗ್ರೆಸ್‌ನ ಜಯಲಕ್ಷ್ಮಿ ಚಂದ್ರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷೆಯಾಗಿ ಪುಟ್ಟಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 16 ಸ್ಥಾನಬಲದ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 6 ಸ್ಥಾನ ಪಡೆಯುವ ಮೂಲಕ ಸಮಬಲ ಸಾಧಿಸಿದ್ದವು. 4 ಸ್ಥಾನ ಗಳಿಸಿದ್ದ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಿತ್ತು. ಚುನಾವಣೆ ವೇಳೆ ಜೆಡಿಎಸ್‌ನ ಸರ್ವಸದಸ್ಯರೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದರಿಂದ ನಿರಾಯಾಸವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾದವು.