ಮಂಗಳವಾರ, ನವೆಂಬರ್ 19, 2019
29 °C
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

ಕಾಲಮಿತಿಯಲ್ಲಿ ಅನುದಾನ ಬಳಕೆ ಮಾಡಿ

Published:
Updated:
Prajavani

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳಿಗೆ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಕಾಲಮಿತಿಯಲ್ಲಿ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಸಭೆಯಲ್ಲಿ ಅವರು ಮಾತನಾಡಿದರು.

ಎಸ್ಸಿಪಿ, ಟಿಎಸ್ಪಿ ಯೋಜನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅದನ್ನು ಅರ್ಥ ಮಾಡಿಕೊಂಡು ಅರ್ಹರಿಗೆ ಯೋಜನೆಗಳನ್ನು ತಲುಪಿಸುವುದು ಅಧಿಕಾರಿಗಳ ಹೊಣೆ. ಆದ್ದರಿಂದ, ಅರ್ಹರಿಗೆ ಯೋಜನೆಯ ಸೌಲಭ್ಯ ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಣ್ಣ ನೀರಾವರಿ, ವಸತಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಜತೆಗೆ ನಿಗದಿಪಡಿಸಿರುವ ಅನುದಾನ ಸಕಾಲದಲ್ಲಿ ತಲುಪಬೇಕು. ನಗರ ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ ನಗರಸಭೆ, ಮೂರು ಪಟ್ಟಣ ಪಂಚಾಯಿತಿಗಳಲ್ಲಿ ಪರಿಶಿಷ್ಟರಿಗೆ ನಿಗದಿ ಪಡಿಸಿರುವ ಅನುದಾನ ವಿನಿಯೋಗಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕೆ.ರಾಧಾ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾದೋ ಹಾಜರಿದ್ದರು.

ಪ್ರತಿಕ್ರಿಯಿಸಿ (+)