ಅತಿವೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಬೆಳೆ ಹಾನಿ: 15ರೊಳಗೆ ವರದಿ ಸಲ್ಲಿಸಲು ಸೂಚನೆ

7

ಅತಿವೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಬೆಳೆ ಹಾನಿ: 15ರೊಳಗೆ ವರದಿ ಸಲ್ಲಿಸಲು ಸೂಚನೆ

Published:
Updated:
Deccan Herald

ಮಡಿಕೇರಿ: ಅತಿವೃಷ್ಟಿಯಿಂದ ಹಾನಿಯಾಗಿರುವ ಕೃಷಿ, ತೋಟಗಾರಿಕೆ, ಕಾಫಿ, ಸಾಂಬಾರ ಬೆಳೆಗಳ ನಷ್ಟದ ವರದಿಯನ್ನು ಸೆ.15ರ ಒಳಗೆ ಸಲ್ಲಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ. ವಿಜಯ ಭಾಸ್ಕರ್‌ ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸೆ.12 ಒಳಗೆ ಜಿಲ್ಲಾಡಳಿತಕ್ಕೆ ಸಂಪೂರ್ಣ ವರದಿ ನೀಡಬೇಕು. ಪ್ರಕೃತಿ ವಿಕೋಪದಿಂದ ಹಲವು ಗ್ರಾಮಗಳು ವಿದ್ಯುತ್ ಸಂಪರ್ಕ ಕಡಿದು ಕೊಂಡಿದ್ದು, ಇಂತಹ ಅತಿವೃಷ್ಟಿ ಪ್ರದೇಶಗಳಿಗೆ ಕೂಡಲೇ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು.

ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್‌ ಸೋಮಶೇಖರ ಮಾತನಾಡಿ, ‘ಕಾಲೂರು, ಹಮ್ಮಿಯಾಲ, ಮುಟ್ಲು, ಹಚ್ಚಿನಾಡು, ತಂತಿಪಾಲ, ಮೇಘತ್ತಾಳು, ಆವಂಡಿ ಮತ್ತು ದೇವಸ್ತೂರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ. ಈ ಗ್ರಾಮಗಳಿಗೆ ನಾಲ್ಕು ದಿನಗಳಲ್ಲಿ ವಿದ್ಯುತ್ ಸಂಪರ್ಕ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು. 

ಕಾಂಡನಕೊಲ್ಲಿ, ಕತ್ತಲೆಕಾಡು ಮತ್ತಿತರ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಒದಗಿಸಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದು, ಈ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಿದರು.  

ಆಹಾರ ಇಲಾಖೆಯ ಉಪ ನಿರ್ದೇಶಕರಾದ ಸದಾಶಿವಯ್ಯ ಮಾತನಾಡಿ, ‘ಪ್ರತಿ ತಿಂಗಳ ಪಡಿತರ ಆಹಾರ ಪದಾರ್ಥ ಬಂದಿದ್ದು, ವಿತರಿಸಲಾಗುವುದು. ಹಾಗೆಯೇ 250 ಕೆ.ಎಲ್. ಸೀಮೆಎಣ್ಣೆ ಪೂರೈಕೆಯಾಗಿದೆ’ ಎಂದು ಮಾಹಿತಿ ನೀಡಿದರು.

ಸಂತ್ರಸ್ತ ಕುಟುಂಬದ ಮಕ್ಕಳಿಗೆ ವಿದ್ಯಾರ್ಜನೆಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ಅತಿವೃಷ್ಟಿಯಿಂದ ಹಾನಿಯಾಗಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳನ್ನು ತ್ವರಿತವಾಗಿ ದುರಸ್ತಿ ಮಾಡಬೇಕು ಎಂದು ಕಾರ್ಯದರ್ಶಿ ಸೂಚನೆ ನೀಡಿದರು.

ಕೆ.ನಿಡುಗಣೆ, ಕರ್ಣಂಗೇರಿ, ಸಂಪಾಜೆ ಮತ್ತು ಮಾದಾಪುರದ ಬಳಿ ಜಾಗ ಗುರ್ತಿಸಲಾಗಿದ್ದು, ಸುಮಾರು 816 ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಬೇಕಿದೆ. 240  ಮನೆಗಳು ಪೂರ್ಣ ಹಾನಿ, 519 ತೀವ್ರತರದ ಮನೆಗಳು ಹಾನಿಯಾಗಿವೆ. ಹಾಗೆಯೇ ಮಡಿಕೇರಿಯಲ್ಲಿ 42 ಮತ್ತು ಕುಶಾಲನಗರದಲ್ಲಿ 23 ಮನೆಗಳು ಹಾನಿಯಾಗಿದೆ ಎಂದು ವಿಶೇಷ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ, ‘ಶಾಶ್ವತ ಮನೆ ಕಲ್ಪಿಸುವ ತನಕ ಬಾಡಿಗೆ ಮನೆಯಲ್ಲಿ ವಾಸಿಸಲು ಹಣ ಭರಿಸುವಂತಾಗಬೇಕು ಎಂಬ ಬಗೆಯೂ ಕೇಳಿ ಬರುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ಅವರ ಗಮನಕ್ಕೆ ತಂದರು. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ’ ಎಂದರು.

ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !