ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ತುಲಾ ಸಂಕ್ರಮಣಕ್ಕೆ ಸಮರೋಪಾದಿ ಸಿದ್ಧತೆ ನಡೆಸಿ: ಸಚಿವ ಎನ್.ಎಸ್.ಭೋಸರಾಜು

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ
Published 26 ಸೆಪ್ಟೆಂಬರ್ 2023, 6:22 IST
Last Updated 26 ಸೆಪ್ಟೆಂಬರ್ 2023, 6:22 IST
ಅಕ್ಷರ ಗಾತ್ರ

ಮಡಿಕೇರಿ: ಕಾವೇರಿ ತುಲಾ ಸಂಕ್ರಮಣಕ್ಕೆ ಇನ್ನು ಕೆಲವೇ ದಿನಗಳು ಉಳಿದಿದ್ದು, ಅಗತ್ಯ ಸಿದ್ಧತಾ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಇಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಲಕಾವೇರಿಗೆ ಸುಗಮ ಸಾರಿಗೆ ಸಂಪರ್ಕ ಕಲ್ಪಿಸಬೇಕು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಬೇಕು, ರಸ್ತೆ ಬದಿ ಬೆಳೆದಿರುವ ಗಿಡಗಳನ್ನು ಕಡಿಯಬೇಕು, ಕುಡಿಯುವ ನೀರು ಕಲ್ಪಿಸಬೇಕು, ಶೌಚಾಲಯ ವ್ಯವಸ್ಥೆ ಮಾಡಬೇಕು, ಶುಚಿತ್ವಕ್ಕೆ ಹೆಚ್ಚು ಒತ್ತು ನೀಡುವುದು, ಆರೋಗ್ಯ ಸೇವೆ ಕಲ್ಪಿಸಬೇಕು ಹೀಗೆ ಹಲವು ನಿರ್ದೇಶನಗಳನ್ನು ನೀಡಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಕೆಎಸ್‍ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು, ರಾತ್ರಿ ವೇಳೆ ತೀರ್ಥೋದ್ಭವ ನಡೆಯುವುದರಿಂದ ಭಾಗಮಂಡಲದಿಂದ ತಲಕಾವೇರಿಯವರೆಗೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ‘ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಂಬಂಧಿಸಿದಂತೆ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಗಮನಹರಿಸಬೇಕು. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸೂಕ್ತ ಭದ್ರತೆ ಒದಗಿಸಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ‘ಭಾಗಮಂಡಲದಿಂದ ತಲಕಾವೇರಿವರೆಗೆ ಭಕ್ತಾದಿಗಳು ನಡೆದುಕೊಂಡು ಹೋಗುತ್ತಾರೆ. ಆದ್ದರಿಂದ ಅಗತ್ಯ ಲೈಟಿಂಗ್ ವ್ಯವಸ್ಥೆ ಮಾಡಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ‘ಎರಡು ಪಾಳಿಯಲ್ಲಿ ಬಂದೋಬಸ್ತ್ ಮಾಡಲಾಗುತ್ತದೆ. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು. ದಸರಾ ಸಂದರ್ಭದಲ್ಲಿ ವಾಹನಗಳ ಓಡಾಟ ಹೆಚ್ಚು ಇರುತ್ತದೆ. ಆದ್ದರಿಂದ ರಸ್ತೆ ಬದಿ ಗಿಡಗಂಟೆಯನ್ನು ಕಡಿಯಬೇಕು’ ಎಂದರು.

ತಲಕಾವೇರಿ ದೇವಾಲಯ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಮಾತನಾಡಿ, ‘ತೀರ್ಥಕುಂಡಿಕೆ ಬಳಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು’ ಎಂದರು.

ಮುಖಂಡ ಎಂ.ಬಿ.ದೇವಯ್ಯ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು. ಕೊಡವ ಸಂಪ್ರದಾಯದಂತೆ ದುಡಿ ತೆಗೆದುಕೊಂಡು ಹೋಗುವವರಿಗೆ ಪ್ರವೇಶಕ್ಕೆ ಅವಕಾಶ ಮಾಡಬೇಕು’ ಎಂದು ಹೇಳಿದರು.

ಕರಿಕೆ ಭಾಗದ ಮುಖಂಡರೊಬ್ಬರು ಮಾತನಾಡಿ, ‘ಭಾಗಮಂಡಲ-ಕರಿಕೆ ರಸ್ತೆ ಸರಿಪಡಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಬಿ.ಎಸ್.ತಮ್ಮಯ್ಯ ಮಾತನಾಡಿ, ‘ತುಲಾ ಸಂಕ್ರಮಣ ಜಾತ್ರೆಗೆ ಸರ್ಕಾರದಿಂದ ₹ 1 ಕೋಟಿ ಅನುದಾನ ಒದಗಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಮಾತನಾಡಿ, ‘ಅನ್ನದಾನದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗದಂತೆ ಗಮನಹರಿಸಬೇಕು. ಈ ಬಾರಿ ‘ಶಕ್ತಿ’ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮುಖಂಡ ಸುನಿಲ್ ಪತ್ರಾವೋ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT