ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಹೆಲಿಪೋರ್ಟ್‌ ನಿರ್ಮಾಣ: ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭರವಸೆ, ಪ್ರವಾಸೋದ್ಯಮ ಅವಲಂಬಿತರಿಂದ ಸಚಿವರ ಭೇಟಿ
Last Updated 29 ಮಾರ್ಚ್ 2021, 12:46 IST
ಅಕ್ಷರ ಗಾತ್ರ

ಮಡಿಕೇರಿ: ‘ಉಡಾನ್’ ಯೋಜನೆ ಅಡಿ ರಾಜ್ಯದಲ್ಲಿ, ರೂಪಿಸಲಾಗಿರುವ ಕಾರ್ಯಕ್ರಮಗಳ ಪೈಕಿ ಹೆಲಿಪೋರ್ಟ್‌ಗಳ ನಿರ್ಮಾಣಕ್ಕಾಗಿ ಆರು ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ ಕೊಡಗು ಜಿಲ್ಲೆ ಕೂಡ ಸೇರಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಇಲ್ಲಿ ಹೇಳಿದರು.

ಕೊಡಗು ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್, ಹೋಂಸ್ಟೇ ಅಸೋಸಿಯೇಷನ್ ಹಾಗೂ ಟೂರ್ಸ್ ಆಂಡ್ ಟ್ರಾವೆಲ್ಸ್ ಅಸೋಸಿಯೇಷನ್‌ ಪ್ರಮುಖರು, ಮಡಿಕೇರಿಯ ಕ್ಲಬ್ ಮಹೇಂದ್ರ ರೆಸಾರ್ಟ್‌ನಲ್ಲಿ ಸಚಿವರನ್ನು ಭೇಟಿಯಾಗಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು, ಕೊಡಗು ಸೇರಿದಂತೆ 6 ಜಿಲ್ಲೆಗಳಲ್ಲಿ ಹೆಲಿಪೋರ್ಟ್‌ಗಳ ನಿರ್ಮಿಸಲಾಗುವುದು ಎಂದರು.

ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳ ಅನುಷ್ಠಾನದ ಸಂದರ್ಭ ಯಾವುದೇ ಕಾರಣಕ್ಕೂ ಕೊಡಗು ಜಿಲ್ಲೆಯನ್ನು ಕಡೆಗಣಿಸುವುದಿಲ್ಲ; ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ಅವರು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಮೂಲಕ ತಲಾ ₹ 30 ಲಕ್ಷದಲ್ಲಿ ರಾಜ್ಯವ್ಯಾಪಿ ಸುಮಾರು ನೂರು ಕ್ಯಾರವನ್ (ಸಂಚಾರಿ ಮನೆ) ವ್ಯವಸ್ಥೆ ಮಾಡಲಾಗುತ್ತಿದ್ದು, ಕೊಡಗಿನ ರೆಸಾರ್ಟ್ ಮತ್ತು ಹೋಂಸ್ಟೇ ಮಾಲೀಕರು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಹತ್ತು ಹೆಲಿಪ್ಯಾಡ್‍ಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಬೆಂಗಳೂರು- ಮೈಸೂರು ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಕೊಡಗಿಗೆ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಜಿಲ್ಲೆಗೆ ಬರುವವರಿಗೆ ಮೂಲ ಸೌಲಭ್ಯ ಕಲ್ಪಿಸಲು ಇಲಾಖೆ ಬದ್ಧವಾಗಿದೆ. ಹುಣಸೂರು- ಸಂಪಾಜೆ ಮಾರ್ಗದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ರೆಸ್ಟೋರೆಂಟ್ ಮತ್ತು ಶೌಚಾಲಯವಿರುವ ವಿರಾಮದ ತಾಣಗಳನ್ನು ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ ಎಂದು ಸಚಿವ ಯೋಗೇಶ್ವರ್ ವಿವರಿಸಿದರು.

ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆಯಿದ್ದು, ತಕ್ಷಣ ಉಪ ನಿರ್ದೇಶಕರನ್ನು ನೇಮಕ ಮಾಡಬೇಕು. ಕೊಡಗಿನ ಗಡಿ ಕೊಪ್ಪದಲ್ಲಿ ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಜಿಲ್ಲೆಯಲ್ಲಿ ಅನಧಿಕೃತ ಹೋಂಸ್ಟೇಗಳ ಹಾವಳಿ ಹೆಚ್ಚಾಗಿದ್ದು, ಅಧಿಕೃತ ಹೋಂಸ್ಟೇಗಳಿಗೆ ಮಾನ್ಯತೆ ದೊರೆಯಬೇಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಡಿಸಿ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರವಾಸಿ ಮಾಹಿತಿ ಕೇಂದ್ರ ಸ್ಥಾಪನೆಗೆ ತಕ್ಷಣ ಕಾರ್ಯ ಪ್ರವೃತ್ತವಾಗುವುದಾಗಿ ಭರವಸೆ ನೀಡಿದರು.

ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನವೀನ್ ಅಂಬೆಕಲ್, ಪದಾಧಿಕಾರಿ ಮೋಂತಿ ಗಣೇಶ್, ಮಾಜಿ ಅಧ್ಯಕ್ಷ ಕರುಂಬಯ್ಯ, ಟೂರ್ಸ್ ಆಂಡ್ ಟ್ರಾವೆಲ್ಸ್ ಅಸೋಸಿಯೇಷನ್‌ ಅಧ್ಯಕ್ಷ ಚೆಯ್ಯಂಡ ಸತ್ಯ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT