ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯಲ್ಲಿ ಆರ್ಥಿಕ, ಭೌತಿಕ ಗುರಿ ಸಾಧಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಎನ್.ಚಲುವರಾಯಸ್ವಾಮಿ
Published 4 ನವೆಂಬರ್ 2023, 6:22 IST
Last Updated 4 ನವೆಂಬರ್ 2023, 6:22 IST
ಅಕ್ಷರ ಗಾತ್ರ

ಮಡಿಕೇರಿ: ‘ಕಾಲಮಿತಿಯಲ್ಲಿ ಕೃಷಿ ಇಲಾಖೆಯ ಎಲ್ಲ ಯೋಜನೆಗಳ ಗುರಿ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಕೃಷಿ ಖಾತೆ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಶುಕ್ರವಾರ ಅವರು ನಡೆಸಿದ ಕೃಷಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕೃಷಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳು, ಕಾರ್ಯಕ್ರಮಗಳ ಆರ್ಥಿಕ ಹಾಗೂ ಭೌತಿಕ ಗುರಿ ಕಾಲಮಿತಿಯಲ್ಲಿ ತಲುಪಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಅಧಿಕಾರಿಗಳು ಹೆಚ್ಚು ಪರಿಶ್ರಮದಿಂದ ಕೆಲಸ ಮಾಡಬೇಕು’ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು, ತಮ್ಮ ಇಲಾಖೆಯ ರಾಜ್ಯವಲಯದ ಯೋಜನೆಗಳು, ಕೇಂದ್ರ ಪುರಸ್ಕೃತ ಯೋಜನೆಗಳು, ಜಲಾನಯನ ಕಾರ್ಯಕ್ರಮಗಳ ಪ್ರಗತಿಯನ್ನು ಮಂಡಿಸಿದರು.

ಇದರಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಶೂನ್ಯ ಸಾಧನೆ ಮಾಡಿರುವ ಅಂಕಿ ಅಂಶಗಳು ಸ್ಲೈಡ್‌ನಲ್ಲಿ ಪ್ರದರ್ಶನಗೊಂಡರೂ ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿಲ್ಲ.

ಕೊಡಗು ಜಿಲ್ಲೆಯಲ್ಲಿ ಕೃಷಿ ಇಲಾಖೆಯಲ್ಲಿ ಒಟ್ಟು ಶೇ 80ರಷ್ಟು ಹುದ್ದೆಗಳು ಖಾಲಿ ಇವೆ ಎಂದು ಸೋಮಸುಂದರ ಅವರು ಪ್ರಸ್ತಾಪಿಸಿದಾಗ, ‘ಖಾಲಿ ಹುದ್ದೆ ಎಲ್ಲೆಡೆ ಇದೆ. ಆದಷ್ಟು ಶೀಘ್ರ ಹುದ್ದೆಗಳನ್ನು ತುಂಬುವ ಪ್ರಯತ್ನ ನಡೆಸಲಾಗುವುದು’ ಎಂದು ಸಚಿವರು ಪ್ರತಿಕ್ರಿಯಿಸಿದರು.

ಉಳಿದಂತೆ ಸೋಮಸುಂದರ ಅವರು, ‘ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ 39ರಷ್ಟು ಮಳೆ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ 67ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಗತಿ ಸಾಧಿಸಲಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಶೇ 90ರಷ್ಟು ಪ್ರಗತಿ ಸಾಧಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿ ಇಕೆವೈಸಿಯಡಿ ಹೆಸರು ನೋಂದಾಯಿಸಲಾಗುತ್ತಿದೆ’ ಎಂದು ಅವರು ವಿವರಿಸಿದರು.

‘ರೈತರ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಿಂದ ಇದುವರೆಗೆ 29 ಪ್ರಕರಣಗಳಲ್ಲಿ 28 ಪ್ರಕರಣಗಳಿಗೆ ಪರಿಹಾರ ವಿತರಿಸಲಾಗಿದ್ದು, ಒಂದು ಪ್ರಕರಣ ಪರಿಹಾರ ವಿತರಿಸಲು ಬಾಕಿ ಉಳಿದಿದೆ’ ಎಂದು ತಿಳಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಪಿ.ಗೌಡ, ಕೃಷಿ ಇಲಾಖೆಯ ನಿರ್ದೇಶಕರಾದ ಡಾ.ಜಿ.ಟಿ.ಪುತ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT