ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಕ್ತದಾನ ಮಾಡಿ, ಜೀವ ಉಳಿಸಿ’

ಕೊಡಗು ಜಿಲ್ಲೆಯಾದ್ಯಂತ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ
Last Updated 17 ಸೆಪ್ಟೆಂಬರ್ 2022, 14:59 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಶನಿವಾರ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ಹಲವು ಬಗೆಯ ಕಾರ್ಯಕ್ರಮಗಳು ನಡೆದವು. ರಕ್ತದಾನ ಶಿಬಿರ, ಆರೋಗ್ಯ ಶಿಬಿರಗಳು ಆಯೋಜನೆಗೊಂಡಿದ್ದವು. ನೂರಾರು ಮಂದಿ ರಕ್ತದಾನ ಮಾಡುವ ಮೂಲಕ ಸೇವಾಪರತೆ ಮೆರೆದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದನಗರದ ರೆಡ್‍ಕ್ರಾಸ್ ಭವನದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಕೆ.ಜಿ.ಬೋಪಯ್ಯ, ‘ಎಲ್ಲರೂ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಬೇಕು’ ಎಂದು ಕರೆ ನೀಡಿದರು.

‘ಜನಸೇವೆ ಮೂಲಕ ಸಮಾಜ ಸೇವೆ ಮಾಡಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಅದರಂತೆ ಸೆ. 17ರಿಂದ ಅ. 2ರ ಗಾಂಧಿ ಜಯಂತಿವರೆಗೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದರು.

‘ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸುವಂತಾಗಬೇಕು. ಪ್ರತಿಯೊಬ್ಬರ ಜೀವಕ್ಕೆ ರಕ್ತದಾನ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಬೇಡಿಕೆ ಹೆಚ್ಚಿದ್ದು, ಎಲ್ಲರೂ ರಕ್ತದಾನ ಮಾಡುವಂತಾಗಬೇಕು. ರಕ್ತದಾನ ಮಾಡುವುದರಿಂದ ಯಾವುದೇ ರೀತಿ ಸಮಸ್ಯೆ ಇರುವುದಿಲ್ಲ’ ಎಂದು ಹೇಳಿದರು.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವ ಗಮನಿಸುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಡೀ ವಿಶ್ವದ ಬಲಿಷ್ಠ ರಾಷ್ಟ್ರಗಳಿಗೆ ಸಲಹೆ ಮಾಡುವ ಮಟ್ಟಕ್ಕೆ ಭಾರತ ಹೆಜ್ಜೆ ಹಾಕಿದೆ’ ಎಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಮಾತನಾಡಿ, ‘ಕ್ಷಯರೋಗವನ್ನು 2025 ರೊಳಗೆ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು’ ಎಂದರು. ‌

ಇದೇ ಸಂದರ್ಭದಲ್ಲಿ ಅಪೌಷ್ಟಿಕತೆ ಉಂಟಾಗಿರುವವರಿಗೆ ರೆಡ್‌ಕ್ರಾಸ್ ಸಂಸ್ಥೆಯಿಂದ ಆಹಾರ ಕಿಟ್ ಅನ್ನು ಶಾಸಕ ಕೆ.ಜಿ.ಬೋಪಯ್ಯ ವಿತರಿಸಿದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಗೋಪಿನಾಥ್, ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮುರಳೀಧರ, ಉಪಾಧ್ಯಕ್ಷ ಎಚ್.ಟಿ.ಅನಿಲ್, ರಕ್ತನಿಧಿ ಕೇಂದ್ರದ ಸುನೀತಾ, ಕಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT