ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು: ಮುನ್ನೆಚ್ಚರಿಕೆ ವಹಿಸಲು ಸೂಚನೆ

ಹಾರಂಗಿ ಜಲಾಶಯದ ಒಳಹರಿವು ಮೇಲೆ ನಿಗಾ ವಹಿಸಿ: ವಿ.ಅನ್ಬುಕುಮಾರ್‌
Last Updated 24 ಜೂನ್ 2020, 13:26 IST
ಅಕ್ಷರ ಗಾತ್ರ

ಮಡಿಕೇರಿ: ‘ಮಳೆಗಾಲವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಜಿಲ್ಲಾಡಳಿತ ಸನ್ನದ್ಧವಾಗಿರಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಮುಂಗಾರು ಮಳೆಯ ಮುಂಜಾಗ್ರತಾ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೊನಾ ಸೋಂಕಿರುವ ಈ ಸನ್ನಿವೇಶದಲ್ಲಿ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದ ಸಂದರ್ಭದಲ್ಲಿ ಮಾಡಬೇಕಾದ ಕಾರ್ಯ ಚಟುವಟಿಕೆಗಳನ್ನು ಪೂರ್ಣಗೊಳಿಸಿಕೊಳ್ಳಬೇಕು. ಪರಿಹಾರ ಕೇಂದ್ರಗಳ ಸೌಕರ್ಯಗಳು, ಜೀವರಕ್ಷಾ ಸಾಧನಗಳ ಬಳಕೆಯ ಬಗ್ಗೆ ಅಗತ್ಯವಿರುವ ತರಬೇತಿಯನ್ನು ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ತಂಡಗಳಿಗೆ ತರಬೇತಿ ನೀಡಿ ತಂಡಗಳನ್ನು ಸನ್ನದ್ಧವಾಗಿಟ್ಟುಕೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಇರುವ ಹಾರಂಗಿ ಜಲಾಶಯದ ನೀರಿನ ಒಳಹರಿವಿನ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಪಡೆದು ಹೆಚ್ಚಿನ ಒಳಹರಿವು ಕಂಡು ಬಂದ ಸಂದರ್ಭದಲ್ಲಿ ಜಲಾಶಯದ ಮತ್ತು ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ನೀರನ್ನು ಹರಿಸಲು ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ತಿಳಿಸಿದರು.

ಕೋವಿಡ್-19 ತಡೆಗಟ್ಟುವುದರೊಂದಿಗೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಮಾತನಾಡಿ, ಈಗಾಗಲೇ ಮಳೆಗಾಲವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೂನ್ ಮೊದಲ ವಾರದಲ್ಲಿಯೇ ಎನ್‍ಡಿಆರ್‍ಎಫ್ ತಂಡ ಜಿಲ್ಲೆಗೆ ಆಗಮಿಸಿದೆ. ಅವಶ್ಯವಿರುವ ಪರಿಕರಗಳನ್ನು ಈಗಾಗಲೇ ಖರೀದಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ಸಾಲಿನಲ್ಲಿ ಅತಿವೃಷ್ಟಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಿರುವ ಮಾಹಿತಿ, ಬೆಳೆ ಹಾನಿ ಪರಿಹಾರ ವಿತರಣೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಕಾಮಗಾರಿಗಳ ಪ್ರಗತಿ ಮಾಹಿತಿಯನ್ನು ಸಭೆಗೆ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಇ ಪ್ರಭು, ಭೂದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT