ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಶೀಘ್ರ; ಮುನ್ನೆಚ್ಚರಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿಯಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆ
Published 17 ಮೇ 2024, 5:12 IST
Last Updated 17 ಮೇ 2024, 5:12 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯನ್ನು ಜೂನ್ ಮೊದಲ ವಾರದಲ್ಲೇ ಮುಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೂಡಲೇ ಎಚ್ಚೆತ್ತುಕೊಂಡು ಎಲ್ಲ ಬಗೆಯ ಮುನ್ನಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯಲ್ಲಿ ಅವರು ಮಾತನಾಡಿದರು. ಕಂದಾಯ, ಸೆಸ್ಕ್, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳ ನಡುವೆ ಸಮನ್ವಯ ಮುಖ್ಯವಾಗಿದೆ. ಎಲ್ಲ ಇಲಾಖೆಯವರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಹವಾಮಾನ ಇಲಾಖೆ ಜಿಲ್ಲೆಯಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ. ಹಾಗೆಂದು ಮೈಮರೆಯಬಾರದು. ಒಂದು ವೇಳೆ ಹೆಚ್ಚಿನ ಮಳೆಯಾದರೆ ಯಾವುದೇ ಬಗೆಯ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನ ಹರಿಸಬೇಕು. ಅಗತ್ಯವಿದ್ದಲ್ಲಿ ಪರಿಹಾರ, ಕಾಳಜಿ ಕೇಂದ್ರಗಳನ್ನು ತೆರೆಯುವುದು ಮತ್ತಿತರ ಕೆಲಸವನ್ನು ನಿರ್ವಹಿಸುವಂತೆಯೂ ಅವರು ಹೇಳಿದರು. ಕೃಷಿಗೆ ಸಂಬಂಧಿಸಿದಂತೆ ಜಿಲ್ಲೆಗೆ ಬೇಕಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಅವರು ಸೂಚಿಸಿದರು.

ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕ ದಳ ಸಿಬ್ಬಂದಿ ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು ಎಂದರು. ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಸರಿಪಡಿಸಬೇಕು. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಸೆಸ್ಕ್ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ್‍ಕುಮಾರ್ ಮಾತನಾಡಿ, ‘ಈಗಾಗಲೇ ಜಿಲ್ಲೆಯಲ್ಲಿ 75 ಮಂದಿ ಗ್ಯಾಂಗ್‍ಮನ್‍ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ, ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸುವುದು, ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಬೇರೇಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದೇಗೌಡ, ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಅನನ್ಯ ವಾಸುದೇವ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ತಹಶೀಲ್ದಾರರಾದ ರಮೇಶ್ ಬಾಬು, ರಾಮಚಂದ್ರ, ಕಿರಣ್ ಗೌರಯ್ಯ, ನವೀನ್ ಕುಮಾರ್, ಮೋಹನ್, ಪೌರಾಯುಕ್ತರಾದ ವಿಜಯ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್ ಭಾಗವಹಿಸಿದ್ದರು.

ಮಡಿಕೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಮಡಿಕೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಮೇ 13ರಂದು ‘ಪ್ರಜಾವಾಣಿ’ ನಮ್ಮ ಜನ ನಮ್ಮ ಧ್ವನಿ ಅಂಕಣದಲ್ಲಿ ‘ವಿಪತ್ತಿಗೂ ಮುನ್ನ ನಡೆಯದ ಸಿದ್ಧತೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.
ಮೇ 13ರಂದು ‘ಪ್ರಜಾವಾಣಿ’ ನಮ್ಮ ಜನ ನಮ್ಮ ಧ್ವನಿ ಅಂಕಣದಲ್ಲಿ ‘ವಿಪತ್ತಿಗೂ ಮುನ್ನ ನಡೆಯದ ಸಿದ್ಧತೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ಜೂನ್ ಮೊದಲ ವಾರದಲ್ಲೇ ಮುಂಗಾರು ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆ ನಿರೀಕ್ಷೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗಿ

ವಿಶೇಷ ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’ ಮೇ 13ರಂದು ‘ಪ್ರಜಾವಾಣಿ’ ನಮ್ಮ ಜನ ನಮ್ಮ ಧ್ವನಿ ಅಂಕಣದಲ್ಲಿ ‘ವಿಪತ್ತಿಗೂ ಮುನ್ನ ನಡೆಯದ ಸಿದ್ಧತೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದರಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆಗೆ ಯಾವುದೇ ಬಗೆಯ ಸಿದ್ಧತಾ ಕಾರ್ಯಗಳೂ ನಡೆದಿಲ್ಲ ಎಂಬ ಕುರಿತು ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT