ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜಕೀಯ ಕ್ಷೇತ್ರದ ತರಬೇತಿ ಅವಧಿ ಪೂರ್ಣ’

ಚುನಾವಣೆ ಪ್ರಚಾರ ಸಭೆಯಲ್ಲಿ ಪ್ರತಾಪ ಸಿಂಹ ಹೇಳಿಕೆ
Last Updated 19 ಮಾರ್ಚ್ 2019, 12:03 IST
ಅಕ್ಷರ ಗಾತ್ರ

ಮಡಿಕೇರಿ: ‘ಸಾಮಾನ್ಯ ಕಾರ್ಯಕರ್ತನೊಬ್ಬ ಚುನಾವಣೆಗೆ ಸ್ಪರ್ಧಿಸಿದರೂ ಗೆಲ್ಲಿಸಿಕೊಡುವಂಥ ಸಾಮರ್ಥ್ಯ ಕೊಡಗು ಜಿಲ್ಲಾ ಬಿಜೆಪಿಗಿದೆ. ಮತ್ತೊಂದು ಅವಧಿಗೆ ಜನರ ಸೇವೆ ಮಾಡಲು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ’ ಎಂದು ಕೊಡಗು– ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಪ್ರತಾಪ್ ಸಿಂಹ ಹೇಳಿದರು.

ಸೋಮವಾರ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸಿದ ಅವರು ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

ಐದು ವರ್ಷಗಳ ಹಿಂದೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಆಶೀರ್ವಾದದಿಂದ ಸಂಸದನಾಗಿ ಆಯ್ಕೆಯಾಗಿದ್ದೆ. ಈಗ ರಾಜಕೀಯ ರಂಗದಲ್ಲಿ ತನ್ನ ತರಬೇತಿ ಅವಧಿ ಪೂರ್ಣವಾಗಿದೆ. ರಾಜಕೀಯ ಕ್ಷೇತ್ರದ ಅನುಭವ ಪಡೆದುಕೊಂಡಿರುವೆ ಎಂದು ಹೇಳಿದರು.

‘ಸಣ್ಣಪುಟ್ಟ ವ್ಯತ್ಯಾಸಗಳ ತಿಳಿವಳಿಕೆ ತನಗಾಗಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಕೊಡಗು ಜಿಲ್ಲೆಗೆ ನಿರೀಕ್ಷಿತ ರೀತಿಯಲ್ಲಿ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ಬಲಗೊಳಿಸುವ ನಿಟ್ಟಿನಲ್ಲಿ ಮುಖಂಡರ ಸೂಚನೆಯಂತೆ ಕಾರ್ಯ ಪ್ರವೃತ್ತನಾಗಿದ್ದರಿಂದ ಕೊಡಗು ಜಿಲ್ಲೆಯ ಉಸ್ತುವಾರಿಯನ್ನು ಬಿಜೆಪಿ ಶಾಸಕರು ವಹಿಸಿಕೊಂಡಿದ್ದರು’ ಎಂದು ಹೇಳಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, 1991ರಲ್ಲಿ ಮಂಗಳೂರು ಕ್ಷೇತ್ರವಿದ್ದಾಗಿನಿಂದಲೂ ಕೊಡಗು ಜಿಲ್ಲೆಯ ಮತದಾರರು ಬಿಜೆಪಿಗೇ ಮತನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಪ್ರಪಂಚವೇ ಮೆಚ್ಚುವ ರೀತಿಯಲ್ಲಿ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಕೆಲಸ ಮಾಡಿದ್ದಾರೆ. ಹೀಗಿರುವಾಗ ಮೋದಿಗೆ ಮತ್ತೊಂದು ಬಾರಿ ಪ್ರಧಾನಿಯಾಗಲು ಅವಕಾಶ ನೀಡುವ ನಿಟ್ಟಿನಲ್ಲಿಯೂ ಕೊಡಗು- ಮೈಸೂರು ಕ್ಷೇತ್ರದಿಂದ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ದೇಶದ ಪ್ರಗತಿ ಕುಂಠಿತಗೊಳಿಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ನಡೆಯುತ್ತಿದ್ದು ಇಂಥವರಿಂದ ಭಾರತವನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಧಾನಿಯಾಗಿ ಮೋದಿ ಮರು ಆಯ್ಕೆಯಾಗಲೇಬೇಕಾಗಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ಬಿಜೆಪಿ ಮುಖಂಡ ಶಾಂತೆಯಂಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಮಡಿಕೇರಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT