ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಬಾಲ್ಯ ವಿವಾಹ ನಡೆದರೆ ಎಫ್‌ಐಆರ್‌: ಡಿಸಿ ಅನೀಸ್‌ ಕಣ್ಮಣಿ ಜಾಯ್‌ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲೆಯ ಹಾಡಿಗಳಲ್ಲಿ ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಹಾಗೂ ಮಕ್ಕಳಿಗಾಗಿ ಗ್ರಾಮಸಭೆ ನಡೆಸಬೇಕು. ಸಭೆಗಳಲ್ಲಿ ಇಲಾಖೆಯ ಸೌಲಭ್ಯ ಹಾಗೂ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ನೀಡುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ತಡೆಯುವ ಬಗ್ಗೆ ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತರು ಜಾಗೃತಿ ಮೂಡಿಸಲು ಸೂಚಿಸಿದರು.

ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲು ಮಾಡಿಸಬೇಕು. ಪ್ರಭಾವ ಒತ್ತಡಗಳಿಗೆ ಮಣಿಯದೇ ಅಪರಾಧಿಗಳ ವಿರುದ್ಧ ಸೂಕ್ರ ಕ್ರಮವಾಗಬೇಕು ಎಂದು ಸೂಚಿಸಿದರು.

ವಕೀಲರಾದ ಮೀನಾಕುಮಾರಿ ಮಾತನಾಡಿ, ಎಫ್‌ಐಆರ್ ದಾಖಲಿಸಿದ್ದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಬೇಕು. ಇದರಿಂದ ಯಾರೂ ಕೂಡ ಎಫ್‌ಐಆರ್ ದಾಖಲಿಸಲು ಮುಂದೆ ಬರುತ್ತಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಬಾಲ್ಯ ವಿವಾಹ ತಡೆಯುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಮುದಾಯದ ಪ್ರತಿನಿಧಿಗಳ ವಿಶ್ವಾಸ ಪಡೆದು ಅಗತ್ಯ ಕ್ರಮ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳ ಕಂಡು ಬಂದಲ್ಲಿ ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಹಾಡಿ ಮಕ್ಕಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಜಾಗೃತಿ ಹೊಂದಲು ಸಾಧ್ಯ. ಮಕ್ಕಳು 5ನೇ ತರಗತಿಯಿಂದಲೇ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಮಾಡುವಂತಾಗಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅರುಂಧತಿ, ಈ ವರ್ಷ ಎರಡು ಬಾಲ್ಯ ವಿವಾಹ ಪ್ರಕರಣ ವರದಿಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

2018–19ನೇ ಸಾಲಿನಲ್ಲಿ 174 ಪ್ರಕರಣಗಳು ದಾಖಲಾಗಿದ್ದು, 84 ಪ್ರಕರಣಗಳು ಇತ್ಯರ್ಥಗೊಂಡಿದ್ದು, 90 ಪ್ರಕರಣಗಳು ಬಾಕಿ ಇವೆ; 13 ಪ್ರಕರಣಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ ಎಂದು ಅರುಂಧತಿ ಮಾಹಿತಿ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು, ಬಾಲ್ಯ ವಿವಾಹ ತಡೆಯುವಲ್ಲಿ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ನಿಟ್ಟಿನಲ್ಲಿ ಅರ್ಹರಿಗೆ ಆಧಾರ್ ಕಾರ್ಡ್ ಕೊಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಮಾತೃಪೂರ್ಣ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದ ಅನೀಸ್ ಕಣ್ಮಣಿ ಜಾಯ್ ಅವರು, ಅರ್ಹರಿಗೆ ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ವಿತರಿಸಲು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮಿಪ್ರಿಯಾ, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ದೌರ್ಜನ್ಯ ಆಗದಂತೆ ಜಾಗೃತಿ ಮೂಡಿಸಬೇಕು. ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಗಮನಹರಿಸಿ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಸಿಡಿಪಿಒ ಸೀತಾಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಆರ್‌ಸಿಎಚ್ ಅಧಿಕಾರಿ ಡಾ.ಆನಂದ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಪೌರಾಯುಕ್ತ ಎಂ.ಎಲ್. ರಮೇಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು