ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ರಸ್ತೆಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಹೆಚ್ಚುವರಿ ₹ 2 ಕೋಟಿ

Last Updated 11 ಮೇ 2019, 12:40 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಹಲವು ಉಪ ಸಮಿತಿ ಸೇರಿದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಜನರಿಗೆ ತೊಂದರೆ ಆಗದಂತೆ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂಬಂಧ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

’ಅಧಿಕಾರಿಗಳು ಜನರಿಗೆ ಸ್ಪಂದಿಸಬೇಕು. ಸಾರ್ವಜನಿಕರನ್ನು ನೋಯಿಸುವುದು ಅಥವಾ ನಿರಾಶ್ರಿತರಿಗೆ ತೊಂದರೆ ನೀಡುವುದು ಕೇಳಿ ಬಂದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಮಹೇಶ್ ಎಚ್ಚರಿಸಿದರು.

ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರು ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಹಾಗೆಯೇ ಸದ್ಯದಲ್ಲಿ ಮುಂಗಾರು ಆರಂಭವಾಗುವುದರಿಂದ ಅಧಿಕಾರಿಗಳು ಯಾರೂ ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ತುರ್ತು ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿ ಅನುಮತಿ ಪಡೆಯಬೇಕು ಎಂದು ಸೂಚಿಸಿದರು.

ಈಗಾಗಲೇ ಜಿಲ್ಲಾಡಳಿತ ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಸಾಕಷ್ಟು ಕುಟುಂಬಗಳಿಗೆ ಪರಿಹಾರ ವಿತರಿಸಿದೆ. ಜಮ್ಮಾ ಹಾಗೂ ಬಾಣೆ ಭೂಮಿ ಸಮಸ್ಯೆವಿರುವ ಇನ್ನೂ ಕೆಲವು ಕುಟುಂಬಗಳಿಗೆ ಪರಿಹಾರ ನೀಡಬೇಕಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರದ ಹಳೇ ಖಾಸಗಿ ಬಸ್ ನಿಲ್ದಾಣ ಬಳಿ ತಡೆಗೋಡೆ ನಿರ್ಮಾಣ ಮಾಡುವ ಕೆಲಸವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಪೌರಾಯುಕ್ತ ರಮೇಶ್‌ಗೆ ಮಹೇಶ್ ಸೂಚಿಸಿದರು.

ನಗರದಲ್ಲಿ ಒಳಚರಂಡಿ ನಿರ್ಮಾಣದಿಂದ ರಸ್ತೆ ಹದಗೆಟ್ಟಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಕೂಡಲೇ ಇದನ್ನು ಸರಿಪಡಿಸಬೇಕು. ಮಳೆಗಾಲ ಮುಗಿಯುವವರೆಗೆ ರಸ್ತೆ ಅಗೆಯಲು ಹೋಗಬೇಡಿ ಎಂದು ಸೂಚಿಸಿದರು.

ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ ವಿಭಾಗ, ಸಣ್ಣ ನೀರಾವರಿ ಹಾಗೂ ಬೃಹತ್ ನೀರಾವರಿ ಮತ್ತಿತರ ಎಂಜಿನಿಯರಿಂಗ್ ವಿಭಾಗದ ಇಲಾಖೆಗಳು ಬಾಕಿಯಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಎಂದು ಸೂಚಿಸಿದರು.

ಜಿಲ್ಲಾಡಳಿತ ಭವನದ ಬಳಿ ಮಂಗಳೂರು ರಸ್ತೆಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ₹ 5 ಕೋಟಿ ನೀಡಲಾಗಿತ್ತು. ಹೆಚ್ಚುವರಿಯಾಗಿ ಮತ್ತೆ ₹ 2 ಕೋಟಿ ಬಿಡುಗಡೆ ಮಾಡಲಾಗುವುದು. ಆದ್ದರಿಂದ ತ್ವರಿತವಾಗಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಲೋಕೋಪಯೋಗಿ ಎಂಜಿನಿಯರ್‌ಗೆ ಸೂಚಿಸಿದರು.

’ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ’ ಎಂಬ ದೂರುಗಳು ಕೇಳಿಬರುತ್ತಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರಕೃತಿ ವಿಕೋಪ ಹಾಗೂ ಬರ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಜಿ.ಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಕಾರಿ ಪಿ. ಶಿವರಾಜು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT