ಕೊಡಗು ಸಂತ್ರಸ್ತರಿಗೆ ನಿವೇಶನ ಗುರುತಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

7
850 ಮನೆ ನಿರ್ಮಾಣದ ಗುರಿ, ರಸ್ತೆ– ಚರಂಡಿ ನಿರ್ಮಾಣಕ್ಕೆ ಸೂಚನೆ

ಕೊಡಗು ಸಂತ್ರಸ್ತರಿಗೆ ನಿವೇಶನ ಗುರುತಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

Published:
Updated:
Deccan Herald

ಮಡಿಕೇರಿ: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಭೂಮಿಯಲ್ಲಿ ನಿವೇಶನ ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿಯಿಂದ ಭೂಕುಸಿತ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಸಂಬಂಧ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪದಿಂದ ಉಂಟಾದ ಹಾನಿ ಹಾಗೂ ಪರಿಹಾರ ಸಂಬಂಧ ಇದುವರೆಗೆ ತಾತ್ಕಾಲಿಕ ಕಾರ್ಯಗಳನ್ನು ನಿರ್ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಶ್ವತ ನೆಲೆ ಕಲ್ಪಿಸಬೇಕಿದೆ. ಆದ್ದರಿಂದ ಸವಾಲುಗಳಿವೆ ಎಂಬುದನ್ನು ಅಧಿಕಾರಿಗಳು ಮರೆಯುವಂತಿಲ್ಲ ಎಂದು ಹೇಳಿದರು.

ಸಂತ್ರಸ್ತ ಕುಟುಂಬದವರಿಗೆ ಆರೋಗ್ಯ, ವಸತಿ, ರಸ್ತೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಉದ್ಯೋಗ ಮತ್ತು ಮಕ್ಕಳಿಗೆ ಶಿಕ್ಷಣ... ಹೀಗೆ ನಾನಾ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಆದ್ದರಿಂದ ರಾಜೀವ್ ಗಾಂಧಿ ಕಾರ್ಪೊರೇಷನ್ ವತಿಯಿಂದ ಜನರ ನಿರೀಕ್ಷೆಗೆ ತಕ್ಕಂತೆ ಮಾದರಿ ಮನೆ ನಿರ್ಮಿಸಲಾಗುವುದು. ಈಗಾಗಲೇ ಗುರುತಿಸಲಾಗಿರುವ ಜಾಗದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯದಂತೆ ನಿವೇಶನ ಗುರುತು ಮಾಡಿ ರಸ್ತೆ, ಚರಂಡಿ, ಎರಡು- ಮೂರು ದಿನದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, ‘ಪುನರ್ವಸತಿ ಸಂಬಂಧ ಒಟ್ಟು 850ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆ ನಿರ್ಮಿಸಬೇಕಿದೆ. ಸದ್ಯ 23 ಎಕರೆ ಸರ್ಕಾರಿ ಭೂಮಿ ಇದ್ದು, 30X40 ಅಡಿ ಅಳತೆಯಲ್ಲಿ 600 ನಿವೇಶನ ಗುರುತು ಮಾಡಬಹುದು’ ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರು ಮನೆ ಹಾನಿ ಸಂಬಂಧ 2,474 ಕುಟುಂಬಗಳಿಗೆ 3,800 ಪರಿಹಾರ ಚೆಕ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂಬಂಧ ಮಾಹಿತಿ ನೀಡಿದ ಕೃಷಿ ಇಲಾಖೆ ಉಪ ನಿರ್ದೇಶಕ ರಾಜು, ‘9 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಆ್ಯಪ್ ಮೂಲಕ ಸರ್ವೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಸದ್ಯದಲ್ಲೇ ಕೇಂದ್ರ ತಂಡ ಭೇಟಿ: ಅತಿವೃಷ್ಟಿಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ಮಾಡಲು ಸದ್ಯದಲ್ಲಿಯೇ ಕೇಂದ್ರ ತಂಡವು ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಅಗತ್ಯ ದಾಖಲೆಗಳ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೋ ಅವರು 2ನೇ ಮೊಣ್ಣಂಗೇರಿ, ಜೋಡುಪಾಲ, ಹಟ್ಟಿಹೊಳೆ ಸರ್ಕಾರಿ ಶಾಲೆಗಳು ಹೊರತುಪಡಿಸಿ, ಉಳಿದಂತೆ ಎಲ್ಲಾ ಕಡೆಗಳಲ್ಲಿ ಶಾಲೆಗಳು ಆರಂಭವಾಗಿವೆ. 30 ಸಾವಿರ ಪಠ್ಯ ಪುಸ್ತಕ ವಿತರಿಸಲಾಗಿದೆ, ನೋಟು ಪುಸ್ತಕ, ಪೆನ್‌, ಪೆನ್ಸಿಲ್, ಜಾಮೆಟ್ರಿಕ್ ಬಾಕ್ಸ್ ವಿತರಿಸಲಾಗುತ್ತಿದೆ. ಸರ್ಕಾರದಿಂದ ₹ 2.48 ಕೋಟಿ ಬಿಡುಗಡೆಯಾಗಿದ್ದು, 85 ಶಾಲಾ ಕಟ್ಟಡಗಳು ಹಾನಿಯಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 144 ಅಂಗನವಾಡಿ ಕಟ್ಟಡಗಳು ಹಾನಿಯಾಗಿದ್ದು, ಇವುಗಳನ್ನು ರಿಪೇರಿ ಮಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.  

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !