ಶುಕ್ರವಾರ, ಏಪ್ರಿಲ್ 23, 2021
21 °C
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಮೂಲ ಸೌಲಭ್ಯ ಕಲ್ಪಿಸುವುದೇ ಸರ್ಕಾರದ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡಿಕೇರಿ: ತಾಲ್ಲೂಕಿನ ಭಾಗಮಂಡಲ ಬಳಿಯ ಕೋರಂಗಾಲ ಗ್ರಾಮದಲ್ಲಿ ₹ 19.61 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ಉದ್ಘಾಟಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಬಡ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರ ಸದುಪಯೋಗವನ್ನು ಬಡ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದ ಕಟ್ಟಕಡೆಯ ಬಡ ವಿದ್ಯಾರ್ಥಿಗಳೂ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು 167 ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. 4 ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯ ಅಡಿ 11 ಲಕ್ಷ ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.

ಆಡಳಿತಾತ್ಮಕ, ಆರ್ಥಿಕ, ನಿವೇಶನ, ಕಟ್ಟಡ... ಹೀಗೆ ವಿವಿಧ ಮೂಲ ಸೌಲಭ್ಯವನ್ನು ಕಲ್ಪಿಸುವುದು ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸ್ಥಳೀಯ ಶಾಸಕರ ಸಹಕಾರ ಮತ್ತು ಶ್ರಮ ಅತ್ಯಗತ್ಯ ಎಂದರು.

6ರಿಂದ ಪದವಿ ಪೂರ್ವ ಶಿಕ್ಷಣದವರೆಗೆ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ಶಿಕ್ಷಣ ನೀಡುವ ಮೂಲಕ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರಕಂಡ ಅತ್ಯುತ್ತಮ ಪ್ರಧಾನ ಮಂತ್ರಿಯಾಗಿ ಜನಮೆಚ್ಚುಗೆ ಗಳಿಸಿದ್ದಾರೆ. ಇವರ ಹೆಸರಿನಲ್ಲಿ ವಸತಿ ಶಾಲೆ ಆರಂಭವಾಗಿರುವುದು ಶ್ಲಾಘನೀಯ ಎಂದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶಿದಿಂದ 6ರಿಂದ ಪದವಿ ಪೂರ್ವ ಶಿಕ್ಷಣದ ವರೆಗೆ ಅಟಲ್ ಬಿಹಾರಿ ವಾಜಪೇಯಿ ಇಂಗ್ಲಿಷ್‌ ಮಾಧ್ಯಮ ವಸತಿ ಶಾಲೆಯನ್ನು ಆರಂಭಿಸಲಾಗಿದೆ. ಇದರ ಸದುಪಯೋಗವನ್ನು ಜಿಲ್ಲೆಯ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

₹ 17 ಕೋಟಿ ವೆಚ್ಚದಲ್ಲಿದ್ದ ಕಟ್ಟಡ ಕಾಮಗಾರಿಯನ್ನು ₹ 2.61 ಕೋಟಿ ಹೆಚ್ಚುವರಿಯಾಗಿ ಬಿಡುಗಡೆ ಮಾಡಿಸಲಾಗಿದೆ. ಇನ್ನೂ ಸ್ವಲ್ಪ ಮೂಲ ಸೌಲಭ್ಯಗಳು ಆಗಬೇಕಿದೆ ಎಂದು ಶಾಸಕರು ಹೇಳಿದರು.

ಆರ್ಥಿಕ ಸಂಕಷ್ಟ ನಡುವೆಯೂ ಸರ್ಕಾರ ಬಡವರ ಅನುಕೂಲಕ್ಕಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ನಾಪೋಕ್ಲುವಿನಲ್ಲಿ ಪರಿಶಿಷ್ಟ ವರ್ಗಗಳ ವಸತಿ ಶಾಲೆ ಆರಂಭವಾಗಲಿದೆ. ಕಟ್ಟಡ ನಿರ್ಮಾಣಕ್ಕೆ ಸಿದ್ಧತೆಗಳು ನಡೆದಿದೆ. ಸದ್ಯ ತಿತಿಮತಿಯಲ್ಲಿ ವಸತಿ ಶಾಲೆ ಆರಂಭವಾಗಿದೆ. ಈ ಸೌಲಭ್ಯವನ್ನು ಪ್ರತೀ ಬಡವರು ಪಡೆದುಕೊಳ್ಳಬೇಕು ಎಂದು ಕೆ.ಜಿ.ಬೋಪಯ್ಯ ಅವರು ನುಡಿದರು.

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಕೊರತೆಯಿಲ್ಲ. ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕೆ.ಜಿ.ಬೋಪಯ್ಯ ಅವರು ನುಡಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲಾ ಕಟ್ಟಡವನ್ನು ಕೊರಂಗಾಲದಲ್ಲಿ ನಿರ್ಮಾಣ ಮಾಡಲು ಶಾಸಕ ಕೆ.ಜಿ.ಬೋಪಯ್ಯ ಅವರ ಎಂಟು ವರ್ಷದ ಶ್ರಮವನ್ನು ಯಾರೂ ಸಹ ಮರೆಯುವಂತಿಲ್ಲ. ಕ್ಷೇತ್ರಕ್ಕೆ ಬೇಕಿರುವ ಕೆಲಸವನ್ನು ಸರ್ಕಾರದ ಮಟ್ಟದಲ್ಲಿ ಪಟ್ಟು ಹಿಡಿದು ಮಾಡಿಸಿಕೊಂಡು ಬರುತ್ತಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಮಾತನಾಡಿ, ಸರ್ಕಾರ ಬಡವರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕಲ್ಪಿಸುತ್ತಿದೆ. ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ, ಕೋವಿಡ್-19ನಿಂದ ಸಾರ್ವಜನಿಕರು ಸಾಕಷ್ಟು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ರಾಜ್ಯ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ಜಿ.ಪಂ ಸದಸ್ಯೆ ಹೊಸಮನೆ ಕವಿತಾ ಪ್ರಭಾಕರ್, ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಗ್ರಾ.ಪಂ ಅಧ್ಯಕ್ಷರಾದ ಪೆಮಿತ, ಬಿಸಿಎಂ ಇಲಾಖೆ ಅಧಿಕಾರಿ ಲಿಂಗರಾಜು, ತಾ.ಪಂ.ಸದಸ್ಯರು ಇತರರು ಇದ್ದರು.

ಪ್ರಾಂಶುಪಾಲರಾದ ಲೋಕೇಶ್ ಸ್ವಾಗತಿಸಿದರು. ಉಪನ್ಯಾಸಕ ರಘು ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕರಾದ ಸಾಧನ ವಂದಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.