ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ ಭೀತಿ: ತಡೆಗೆ ಸಿದ್ಧತೆ

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 560 ಹಾಸಿಗೆ ವ್ಯವಸ್ಥೆ
Last Updated 5 ಡಿಸೆಂಬರ್ 2021, 12:46 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದಲ್ಲೂ ‘ಓಮೈಕ್ರಾನ್‌’ ಪ್ರಕರಣಗಳು ಪತ್ತೆಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಜನರ ಆರೋಗ್ಯ ಕಾಪಾಡಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಕೋವಿಡ್‌ 1 ಹಾಗೂ 2ನೇ ಅಲೆಯ ವೇಳೆ ಕರ್ತವ್ಯ ನಿರ್ವಹಿಸಿದ್ದ ಜಿಲ್ಲಾಧಿಕಾರಿ ಹಾಗೂ ಡಿಎಚ್‌ಒ ಅವರು ವರ್ಗಾವಣೆಗೊಂಡಿದ್ದಾರೆ. ಅವರ ಜಾಗಕ್ಕೆ ಹೊಸ ಅಧಿಕಾರಿಗಳ ಆಗಮನವಾಗಿದೆ. ಹೊಸ ಅಧಿಕಾರಿಗಳು, ಜಿಲ್ಲೆ ಜನರ ಆರೋಗ್ಯ ಕಾಪಾಡುವ ಹೊಣೆ ಹೊತ್ತಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಧಾರ್ಮಿಕ ಮುಖಂಡರ ಸಭೆ ನಡೆಸಿ, ಸಿದ್ಧತೆಯ ಮಾಹಿತಿ ಪಡೆದುಕೊಂಡಿದ್ದಾರೆ. ಒಂದು ವೇಳೆ ಮೂರನೇ ಅಲೆ ಬಂದರೆ, ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರತ್ಯೇಕ ನಿರ್ಬಂಧ ಹೇರಿಲ್ಲ. ರಾಜ್ಯ ಸರ್ಕಾರವೇ ಪ್ರಕಟಿಸಿರುವ ನಿರ್ಬಂಧಗಳು ಜಿಲ್ಲೆಗೂ ಅನ್ವಯ ಆಗುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2020ರ ಮಾರ್ಚ್‌ 19ರಂದು ಜಿಲ್ಲೆಗೂ ಕೋವಿಡ್‌ ಕಾಲಿಟ್ಟಿತ್ತು. ಅದಾದ ಮೇಲೆ ಜಿಲ್ಲಾ ಆಸ್ಪತ್ರೆಯನ್ನೇ ಕೋವಿಡ್‌ ಆಸ್ಪತ್ರೆಯಾಗಿ ಬದಲಾವಣೆ ಮಾಡಲಾಗಿತ್ತು. ಅಶ್ವಿನಿ ಆಸ್ಪತ್ರೆಯಲ್ಲಿ ಉಳಿದ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಒಂದು ತಿಂಗಳಲ್ಲಿ ನಿಧಾನವಾಗಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದಂತೆಯೇ ಅಶ್ವಿನಿ ಆಸ್ಪತ್ರೆಯಲ್ಲಿ ಲಭಿಸುತ್ತಿದ್ದ ಕೆಲವು ವಿಭಾಗಗಳನ್ನು ಜಿಲ್ಲಾ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನಗರದ ಮೆಡಿಕಲ್ ಕಾಲೇಜಿನಲ್ಲಿ 200 ಹಾಸಿಗೆ ವ್ಯವಸ್ಥೆಯಿದೆ. ಜಿಲ್ಲಾ ಆಸ್ಪತ್ರೆ, ಮೆಡಿಕಲ್ ಕಾಲೇಜು ಮತ್ತು ಪ್ರತೀ ತಾಲ್ಲೂಕು ಆಸ್ಪತ್ರೆಯಲ್ಲಿ ಆಮ್ಲಜಕನ ಘಟಕ ಸಿದ್ಧವಾಗಿದೆ. ಜಿಲ್ಲೆಯಲ್ಲಿ 560 ಬೆಡ್‌ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಡಾ.ವೆಂಕಟೇಶ್‌ ಮಾಹಿತಿ ನೀಡಿದ್ದಾರೆ. ಡಿಎಚ್‌ಒ ವಿವಿಧೆಡೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ಸಹ ನಡೆಸಿದ್ದಾರೆ.

ಗಡಿಯಲ್ಲೂ ನಿಗಾ:

ಕೇರಳದಲ್ಲೂ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ಮುಂದುವರಿದಿದೆ. ಜಿಲ್ಲೆಯ ಮಾಕುಟ್ಟ, ಕರಿಕೆ ಹಾಗೂ ಕುಟ್ಟ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಬೀಡುಬಿಟ್ಟಿದ್ದು ಕೋವಿಡ್‌ ನೆಗೆಟಿವ್‌ ಪ್ರಮಾಣ ಪತ್ರವಿಲ್ಲದೇ ಬಂದವರನ್ನು ವಾಪಸ್‌ ಕಳುಹಿಸಲಾಗುತ್ತಿದೆ.

‘ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ‘ಓಮೈಕ್ರಾನ್’ ದಕ್ಷಿಣ ಆಪ್ರಿಕಾ, ಇಂಗ್ಲೆಂಡ್, ಜರ್ಮನಿ, ನೆದರ್ ಲ್ಯಾಂಡ್, ಆಸ್ಟ್ರೇಲಿಯ, ಡೆನ್ಮಾರ್ಕ್, ಬೆಲ್ಜಿಯಂ ರಾಷ್ಟ್ರಗಳಲ್ಲಿ ಹರಡಿದ್ದು ಮುನ್ನೆಚ್ಚರಿಕೆ ವಹಿಸಬೇಕಿದೆ. 18 ವರ್ಷ ಮೇಲ್ಪಟ್ಟವರೆಲ್ಲರೂ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT