‘ಸಖಿ’ ಮತಗಟ್ಟೆ: ಸಿದ್ಧತೆಗೆ ಸೂಚನೆ

ಬುಧವಾರ, ಏಪ್ರಿಲ್ 24, 2019
28 °C
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಅಧ್ಯಕ್ಷತೆಯಲ್ಲಿ ಸಭೆ

‘ಸಖಿ’ ಮತಗಟ್ಟೆ: ಸಿದ್ಧತೆಗೆ ಸೂಚನೆ

Published:
Updated:
Prajavani

ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಮತದಾನ, ಮಸ್ಟರಿಂಗ್, ಡಿಮಸ್ಟರಿಂಗ್ ಸೇರಿದಂತೆ ಚುನಾವಣಾ ಕಾರ್ಯಗಳನ್ನು ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಏ.17ರಂದು ಮಸ್ಟರಿಂಗ್ ಕಾರ್ಯವನ್ನು ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಯಶಸ್ವಿಗೊಳಿಸಬೇಕು. ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗೆ ತಲುಪಿದ್ದಾರೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು.

ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಮೂಲಸೌಲಭ್ಯ ಒದಗಿಸಬೇಕು. ಮತಗಟ್ಟೆ ಸ್ಥಿತಿ, ಮತಗಟ್ಟೆ ಆವರಣ ಸ್ವಚ್ಛವಾಗಿ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ವಿದ್ಯುತ್ ವ್ಯವಸ್ಥೆ, ಶೌಚಾಲಯ, ಪೀಠೋಪಕರಣ, ರ‍್ಯಾಂಪ್‌, ಕುಡಿಯುವ ನೀರು ಇದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದರು. 

ಜಿಲ್ಲೆಯಲ್ಲಿ 10 ಸಖಿ ಮತಗಟ್ಟೆಗಳು, 5 ಸಾಂಪ್ರದಾಯಿಕ ಮತಗಟ್ಟೆ ಹಾಗೂ 1 ಅಂಗವಿಕಲರ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಆಯ್ದ 30 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.

‘ಸ್ವೀಪ್’ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮಿಪ್ರಿಯಾ, ‘ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮಾತನಾಡಿ, ‘ಚುನಾವಣಾ ಆಯೋಗದ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣೆ ಸಂಬಂಧ ಹದ್ದಿನ ಕಣ್ಣಿಡಬೇಕಿದೆ’ ಎಂದು ಹೇಳಿದರು.  

ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್, ವಾಲ್ಟರ್ ಡಿಮೆಲ್ಲೋ, ಷಂಶುದ್ದೀನ್ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !