ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಾರ್ಥ ಬಿಡಿ, ಸಮಾಜದ ಒಳಿತಿಗೆ ಶ್ರಮಿಸಿ’

ಡಿಎಸ್‌ಎಸ್‌ನಿಂದ ಮೂರು ಶಾಲೆಯ 125 ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ
Last Updated 3 ಜುಲೈ 2019, 14:29 IST
ಅಕ್ಷರ ಗಾತ್ರ

ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ (ಡಿಎಸ್‌ಎಸ್‌) ವತಿಯಿಂದ ನಗರದ ಮೂರು ಶಾಲೆಗಳ 125 ಮಕ್ಕಳಿಗೆ ಉಚಿತ ನೋಟ್‌ಬುಕ್‌ ವಿತರಣೆ ಮಾಡಲಾಯಿತು.

ನಗರದ ಪತ್ರಿಕಾಭವನದಲ್ಲಿ ಬುಧವಾರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪುಸ್ತಕ ವಿತರಣೆ ಮಾಡಿದರು.

ಜಿಲ್ಲಾ ಛೇಂಬರ್‌ ಆಫ್‌ ಕಾಮರ್ಸ್‌ ಮಾಜಿ ಅಧ್ಯಕ್ಷ ಜಿ. ಚಿದ್ವಿಲಾಸ್‌ ಮಾತನಾಡಿ, ‘ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಶಿಕ್ಷಣ ನೀಡಬೇಕು. ಆಗ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬರುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

ಕಳೆದ 10 ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಗಣನೀಯವಾಗಿ ಮಕ್ಕಳ ಸಂಖ್ಯೆ ಇಳಿಕೆ ಕಂಡಿದೆ. ಸರ್ಕಾರಿ ಶಾಲೆಗಳ ಉತ್ತಮ ನಿರ್ವಹಣೆ ಮತ್ತು ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಶಿಕ್ಷಣ ವ್ಯವಸ್ಥೆ ಜಾರಿಗೊಂಡಲ್ಲಿ ಸರ್ಕಾರಿ ಶಾಲೆಗಳನ್ನು ಭವಿಷ್ಯತ್ತಿನಲ್ಲಿ ಉಳಿಸಬಹುದು ಎಂದು ಹೇಳಿದರು.

ಖಾಸಗಿ ಆಸ್ಪತ್ರೆ ವೈದ್ಯ ಬಿ.ಸಿ.ನವೀನ್‌ ಕುಮಾರ್‌ ಮಾತನಾಡಿ, ‘ಐಎಎಸ್, ಐಪಿಎಸ್ ಮಾಡುವ ಗುರಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಇರಬೇಕು. ಬಾಲ್ಯದಿಂದಲೇ ಓದಿನ ಕಡೆಗೆ ಆಸಕ್ತಿ ಬೆಳೆಸುವ ಕಾರ್ಯವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕು’ ಎಂದು ಸಲಹೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್, ‘ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಹೆಚ್ಚಿನ ಮಂದಿ ಬಡ ವಿದ್ಯಾರ್ಥಿಗಳೇ ಆಗಿದ್ದಾರೆ. ಮಕ್ಕಳಿಗೆ ಪುಸ್ತಕ, ಬ್ಯಾಗ್‌ ಇನ್ನಿತರ ಕಲಿಕಾ ಪರಿಕರಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕರನ್ನುಸಮಿತಿಯಿಂದ ಗೌರವಿಸಲಾಗುತ್ತಿದೆ’ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ಎನ್‌.ವೀರಭದ್ರಯ್ಯ ಮಾತನಾಡಿ, ‘ಮಕ್ಕಳು ಸತ್ಪ್ರಜೆಗಳಾಗಿ ಬೆಳೆಯುವಲ್ಲಿ ವಿದ್ಯೆ ಪ್ರಮುಖ ಪಾತ್ರ ವಹಿಸುತ್ತದೆ. ದಾನಿಗಳು ನೀಡಿದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಶ್ರೇಷ್ಠಮಟ್ಟದ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಆರ್‌. ರವೀಂದ್ರ ರೈ, ‘ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಕರೆ ನೀಡಿದರು.

ಗುತ್ತಿಗೆದಾರ ಐತ್ತಪ್ಪ ರೈ, ಮಡಿಕೇರಿ ನಗರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ಕೃಷಿ ಅಧಿಕಾರಿ ಭರತ್‌, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ದೀಪಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT