ನಾಪೋಕ್ಲು: ಕಲ್ಪನೆಗಳಿಗೆ ಸೃಜನಶೀಲತೆಯ ಅಕ್ಷರ ಸೇರಿಸಿದಾಗ ಕಾವ್ಯವಾಗುತ್ತದೆ. ಕಾವ್ಯ ಮನೋವಿಕಾಸಕ್ಕೆ ಕಾರಣವಾಗುತ್ತದೆ ಎಂದು ಮಡಿಕೇರಿಯ ಮೆಡಿಕಲ್ ಕಾಲೇಜಿನ ನಿವೃತ್ತ ಆಡಳಿತ ಅಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ ಅಭಿಪ್ರಾಯಪಟ್ಟರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಇವರ ಸಹಯೋಗದಲ್ಲಿ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಳೆಗಾಲದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಾಠದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಶ್ರೇಯಸ್ಸನ್ನು ಕಾಣುವಂತಾಗಬೇಕು ಎಂದರು.
ನಿವೃತ್ತ ಮುಖ್ಯಶಿಕ್ಷಕಿ ಪುದಿಯನೆರವನ ರೇವತಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಮಹಿಳಾ ಬರಹಗಾರರು ವಿರಳವಾಗಿದ್ದು, ಮಹಿಳೆಯರನ್ನು ಸಾಹಿತ್ಯ ಕ್ಷೇತ್ರದಲ್ಲಿ ಪ್ರೋತ್ಸಾಹಿಸಿ ಗುರುತಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘವನ್ನು ಸ್ಥಾಪಿಸಲಾಯಿತು. ಪ್ರತಿ ತಿಂಗಳು ಸಂಘದ ವತಿಯಿಂದ ಸಾಹಿತ್ಯ ಶಿಬಿರ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಮೊಣ್ಣಂಡ ಶೋಭಾ ಸುಬ್ಬಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಕವನವಾಚಿಸುವ ವಿಧಾನಗಳನ್ನು ತಿಳಿಸಿದರು. ಕಾಲೇಜು ಪ್ರಾಂಶುಪಾಲರಾದ ಡಾ. ಕಾವೇರಿ ಪ್ರಕಾಶ್ ಮಾತನಾಡಿದರು.
ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಕವಿಗೋಷ್ಠಿ ಸ್ಪರ್ಧೆಯಲ್ಲಿ 14 ವಿದ್ಯಾರ್ಥಿಗಳು ಕವನ ವಾಚಿಸಿದರು. ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷ ಮೊಣ್ಣಂಡ ಶೋಭಾ ಸುಬ್ಬಯ್ಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕರಾದ ಕಡ್ಲೆರ ತುಳಸಿ ಮೋಹನ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಬಳಗದ ಮಾಜಿ ಅಧ್ಯಕ್ಷೆ ಕಸ್ತೂರಿ ಗೋವಿಂದಮ್ಮಯ್ಯ, ನಿರ್ದೇಶಕರಾದ ತೆನ್ನೀರ ರಾಧ ಪೊನ್ನಪ್ಪ, ಕೂಪದಿರ ಸುಂದರಿ ಮಾಚಯ್ಯ ಇದ್ದರು. ಕಾರ್ಯಕ್ರಮದಲ್ಲಿ ಕವನವಾಚಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಡಾ. ಕಾವೇರಿ ಪ್ರಕಾಶ್ ಸ್ವಾಗತಿಸಿದರು. ವಿದ್ಯಾರ್ಥಿನಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು .ವಿದ್ಯಾರ್ಥಿನಿ ಸೀತಮ್ಮ ಕೆ .ಆರ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.