ಭಾನುವಾರ, ಆಗಸ್ಟ್ 1, 2021
26 °C
ಪ್ರತಾಪ ಸಿಂಹ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ, ಉಸ್ತುವಾರಿ ಸಮಿತಿ ಸಭೆ

ಸಮರ್ಪಕ ವಿದ್ಯುತ್‌ ಪೂರೈಕೆ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನ ಹರಿಸಬೇಕು ಎಂದು ಸಂಸದ ಪ್ರತಾಪ ಸಿಂಹ ಸೂಚಿಸಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್–19ರಿಂದ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಳೆಗಾಲದ ಸಂದರ್ಭ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗದಂತೆ ಪರೀಕ್ಷೆಯ ಸಂದರ್ಭ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಹೇಳಿದರು.‌

ಸೆಸ್ಕ್‌ ಕಾರ್ಯ ನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಪ್ರತಿಕ್ರಿಯಿಸಿ, ‘ಪರೀಕ್ಷಾ ಸಂದರ್ಭ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪ್ರತಾಪ ಸಿಂಹ ಮಾತನಾಡಿ, ‌‘ಸೌಭಾಗ್ಯ ಮತ್ತು ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕು’ ಎಂದು ಹೇಳಿದರು.

ಬಾಳೆಲೆ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಸ್ಥಳೀಯ ಜನಪ್ರತಿನಿಧಿಗಳು ತಿಳಿಸಿದ್ದಾರೆ. ಆ ಭಾಗದಲ್ಲಿನ ಸಮಸ್ಯೆಯನ್ನು ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಪರಿಹರಿಸಿ. ಸೆಸ್ಕ್‌ ಕಿರಿಯ ಎಂಜಿನಿಯರ್‌ ಸಭೆ ಕರೆದು ಜಿಲ್ಲೆಯಲ್ಲಿನ ವಿದ್ಯುತ್ ಸಂಬಂಧ ಇರುವ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ‌‌‘ವಿದ್ಯುತ್‌ ಪರಿವರ್ತಕ ಹಾಳಾದ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ಬದಲಿಸಿಕೊಡಬೇಕು. ಯಾವುದೇ ಕಾರಣಕ್ಕೂ ವಿಳಂಬವನ್ನು ಮಾಡ ಬಾರದು’ ಎಂದು ತಾಕೀತು ಮಾಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಪೂರಕ ಅವಕಾಶ ಕಲ್ಪಿಸಿಕೊಡಬೇಕು. 2022ರಲ್ಲಿ ಎಲ್ಲರೂ ಸ್ವಂತ ಸೂರು ಹೊಂದಬೇಕು ಎಂಬ ಕೇಂದ್ರ ಸರ್ಕಾರದ ಆಶಯದೊಂದಿಗೆ ಈ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಲು ಅಗತ್ಯ ಅವಕಾಶಗಳನ್ನು ಕಲ್ಪಿಸಿ ಎಂದು ಸಂಸದರು ಸೂಚಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ‘ಬಜೆಗುಂಡಿ, ವಾಲ್ನೂರು ಮತ್ತು ತ್ಯಾಗತ್ತೂರು ಸೇರಿದಂತೆ ಇನ್ನೂ ಹಲವು ಹಾಡಿಗಳಲ್ಲಿ ವಾಸಿಸುತ್ತಿರುವ ಅರಣ್ಯದಲ್ಲಿನ ಪರಿಶಿಷ್ಟ ಪಂಗಡದ ಜನರಿಗೆ ಹಕ್ಕುಪತ್ರ ನೀಡುವ ಕಾರ್ಯ ಮಾಡಬೇಕು. ಅಲ್ಲದೇ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸಮನ್ವಯತೆಯಲ್ಲಿ ಗ್ರಾಮ ಸಭೆಗಳನ್ನು ನಡೆಸಬೇಕು. ಗ್ರಾಮ ಸಭೆಯ ಮೂಲಕ ಹಾಡಿಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಮಾತನಾಡಿ, ‘ರಾಜ್ಯ ಸರ್ಕಾರದ 2 ತಿಂಗಳ ಪಡಿತರ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗಿದೆ. ಅಲ್ಲದೇ ಪಡಿತರ ಚೀಟಿ ಹೊಂದಿಲ್ಲದ ವಲಸಿ ಗರಿಗೂ ಸಹ ಆಧಾರ್ ಕಾರ್ಡ್ ಮೂಲಕ ಪಡಿತರ ವಿತರಿಸಲಾಗಿದೆ ಎಂದರು.

ಇಲಾಖೆ ವತಿಯಿಂದ ಸಮರ್ಪಕವಾಗಿ ಪಡಿತರ ವಿತರಣೆ ಮಾಡಿ, ಜಿಲ್ಲೆಯಲ್ಲಿ ಪ್ರಸ್ತುತ ಎಷ್ಟು ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿವೆ ಎಂಬ ಬಗ್ಗೆ ಸಂಸದರು ಆಹಾರ ಇಲಾಖೆಯ ಉಪ ನಿರ್ದೇಶಕರನ್ನು ಪ್ರಶ್ನಿಸಿದರು.

ಜಿಲ್ಲೆಯಲ್ಲಿ 10,046 ಅಂತ್ಯೋದಯ, 99,358 ಬಿಪಿಎಲ್ ಮತ್ತು 29,613 ಎಪಿಲ್ ಕಾರ್ಡು ದಾರರ ಕುಟುಂಬಗಳಿವೆ ಎಂದು ಗೌರವ್ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮೀಪ್ರಿಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಪುಷ್ಪಾ ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಇದ್ದರು.

ಕೋವಿಡ್‌ ‍ಪೀಡಿತರ ಸಂಖ್ಯೆ 47ಕ್ಕೆ ಏರಿಕೆ

ಮಡಿಕೇರಿ: ‘ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ ಕೆಲ ದಿನಗಳಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 3 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 44 ಜನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 4 ಮಂದಿಗೆ ಮಾತ್ರವೇ ರೋಗ ಲಕ್ಷಣವಿದೆ’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ‘ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸುವ ಜೊತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಸಶಕ್ತಗೊಳಿಸುವ ಅಗತ್ಯತೆಯಿದೆ. ದೇಶದಾದ್ಯಂತ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಸಂಬಂಧ ಹೆಚ್ಚುವರಿ ವೆಂಟಿಲೇಟರ್ ಅಗತ್ಯವಿದ್ದರೆ ಖರೀದಿಸಲು ಕ್ರಮ ಕೈಗೊಳ್ಳಿ’ ಎಂದು ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಅವರಿಗೆ ತಿಳಿಸಿದರು. 

**

ಪಿಎಂಜಿಎಸ್‍ವೈ ಕೆಲಸ ಗಳನ್ನು ತುರ್ತಾಗಿ ಪೂರ್ಣ ಗೊಳಿಸಬೇಕು. ಹೊಸದಾಗಿ ಅಗತ್ಯವಿರುವ ಕಡೆಗಳಲ್ಲಿ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.

– ಪ್ರತಾಪ ಸಿಂಹ, ಸಂಸದ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು